ಡೈಲಿವಾರ್ತೆ:15/ಅ./2026

ಮಂಗಳೂರು: ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ – ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ತನಿಖೆಗೆ ಸೂಚನೆ!

ಮಂಗಳೂರು: ನಗರದ ಚರ್ಚ್‌ವೊಂದರ ಧರ್ಮಗುರು ವಿರುದ್ಧ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತ ಮಕ್ಕಳು ಹಾಗೂ ಅವರ ಪೋಷಕರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನಿರ್ದೇಶನಾಲಯವು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಮಂಗಳೂರು ಧರ್ಮಪ್ರಾಂತಕ್ಕೆ ಸೇರಿದ ಪಾದ್ರಿಯೊಬ್ಬರು 50ಕ್ಕೂ ಹೆಚ್ಚು ಬಾಲಕರ ಮೇಲೆ ಲೈಂಗಿಕ ಶೋಷಣೆ ನಡೆಸಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಸಂತ್ರಸ್ತ ಮಕ್ಕಳು ಹಾಗೂ ಅವರ ಪೋಷಕರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ. ದೂರಿನಲ್ಲಿ ಸಂತ್ರಸ್ತರ ಗುರುತು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ನಿರ್ದಿಷ್ಟ ವಿವರಗಳನ್ನು ಉಲ್ಲೇಖಿಸಲಾಗಿಲ್ಲ ಎಂದು ಮಕ್ಕಳ ರಕ್ಷಣಾ ಘಟಕದ ಮೂಲಗಳು ತಿಳಿಸಿವೆ. ಈ ವಿಚಾರವನ್ನು ಪೊಲೀಸ್ ಇಲಾಖೆಯ ಗಮನಕ್ಕೂ ತರಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಕ್ಕಳು ಹಾಗೂ ಅವರ ಪೋಷಕರು ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಬಿಷಪ್ ಅವರಿಗೂ ಪತ್ರ ಬರೆದು ದೂರು ಸಲ್ಲಿಸಿದ್ದರು ಎನ್ನಲಾಗಿದೆ. ಆದರೆ, ಅಲ್ಲಿಂದ ನಿರೀಕ್ಷಿತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ನಿರ್ದೇಶನಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಬಾಲಕರ ಮೇಲಿನ ಲೈಂಗಿಕ ಕಿರುಕುಳದ ಆರೋಪ ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ. ಸಂತ್ರಸ್ತ ಮಕ್ಕಳ ಸುರಕ್ಷತೆ, ಗೌಪ್ಯತೆ ಹಾಗೂ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡುವ ಅಗತ್ಯವೂ ಇದೆ.

ಈ ಪ್ರಕರಣದ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆರೋಪಗಳ ಬಗ್ಗೆ ತನಿಖೆ ಪೂರ್ಣಗೊಂಡು ಅಧಿಕೃತ ವಿವರಗಳು ಹೊರಬಂದ ಬಳಿಕವಷ್ಟೇ ಪ್ರಕರಣದ ಸಂಪೂರ್ಣ ಚಿತ್ರಣ ಸ್ಪಷ್ಟವಾಗಬೇಕಿದೆ.