ಡೈಲಿವಾರ್ತೆ:16/ಅ./2026

ಪಿರಿಯಾಪಟ್ಟಣದ ಬಳಿ ಭೀಕರ ರಸ್ತೆ ದುರಂತ: ಲಾರಿ – ಸ್ಲೀಪರ್ ಕೋಚ್ ಬಸ್ ಮುಖಾಮುಖಿ ಢಿಕ್ಕಿ: ನಾಲ್ವರ ದುರ್ಮರಣ

ಮೈಸೂರು, ಅ. 16: ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಢಿಕ್ಕಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಿರನಹಳ್ಳಿ ಗೇಟ್ ಸಮೀಪ ಶುಕ್ರವಾರ ಮುಂಜಾನೆ ಈ ದುರಂತ ಸಂಭವಿಸಿದೆ.

ಬೆಂಗಳೂರಿನಿಂದ ಕೇರಳದ ಕ್ಯಾಲಿಕಟ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕಾವೇರಿ ಸ್ಲೀಪರ್ ಕೋಚ್ ಬಸ್ ಹಾಗೂ ಪಿರಿಯಾಪಟ್ಟಣದಿಂದ ಮೈಸೂರಿನತ್ತ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಬಸ್ ಚಾಲಕ ಸುನೀಲ್, ಕ್ಲೀನರ್ ಸದೇಶ್ ಹಾಗೂ ಕೇರಳದ ಅಫ್ತಾಬ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಮತ್ತೊಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಐವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ಇತರ ಪ್ರಯಾಣಿಕರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತಕ್ಕೀಡಾದ ಬಸ್‌ನಲ್ಲಿ ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಕೇರಳ ಮೂಲದವರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಣಸೂರು ಉಪವಿಭಾಗದ ಡಿವೈಎಸ್‌ಪಿ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.