ಡೈಲಿವಾರ್ತೆ:17/ಅ./2026

ದಾವಣಗೆರೆ: ಸಿಎನ್‌ಜಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ದುರ್ಮರಣ; ಮತ್ತೊಬ್ಬನ ಸ್ಥಿತಿ ಗಂಭೀರ

ದಾವಣಗೆರೆ, ಅ. 16: ಸಿಎನ್‌ಜಿ ತುಂಬಿಕೊಂಡು ಸಂಚರಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಸುಜನ್ (16) ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ತೀವ್ರವಾಗಿ ಗಾಯಗೊಂಡಿದ್ದ ರಾಮ್ ತೇಜ್ ರೆಡ್ಡಿ (17) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಗಂಭೀರ ಗಾಯಗಳಾಗಿರುವ ಆದಿತ್ಯ (16) ಎಂಬ ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೃತ ವಿದ್ಯಾರ್ಥಿಗಳು ಹಾಗೂ ಗಾಯಗೊಂಡ ವಿದ್ಯಾರ್ಥಿ ದಾವಣಗೆರೆಯ ಶಕ್ತಿನಗರ ಮತ್ತು ಜೆ.ಎಚ್. ಪಟೇಲ್ ಬಡಾವಣೆ ನಿವಾಸಿಗಳೆಂದು ತಿಳಿದುಬಂದಿದೆ. ಬೆಂಗಳೂರು ಕಡೆಯಿಂದ ದಾವಣಗೆರೆಯತ್ತ ಕಾರು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿರಬಹುದೆಂದು ಪೊಲೀಸರು ಶಂಕಿಸಿದ್ದು, ಘಟನೆಯ ನಿಖರ ಕಾರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಬೇಕಾಯಿತು. ಮೃತ ವಿದ್ಯಾರ್ಥಿಯ ಶವವನ್ನು ಹೊರತೆಗೆಯಲು ಹೆದ್ದಾರಿ ಗಸ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ವಿಷಯ ತಿಳಿದು ದಾವಣಗೆರೆ ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಭೀಕರ ದೃಶ್ಯ ಲಾರಿಯಲ್ಲಿದ್ದ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.