ಡೈಲಿವಾರ್ತೆ:18/ಅ./2026

ಕುಂದಾಪುರ ಸ್ಮಾರ್ಟ್ ಬಜಾರ್‌ನಲ್ಲಿ ದಿಢೀರ್ ಅಗ್ನಿ ಅವಘಡ; ಕೆಲಕಾಲ ಆತಂಕ!

ಕುಂದಾಪುರ, ಆ. 18: ಇಲ್ಲಿನ ಸ್ಮಾರ್ಟ್ ಬಜಾರ್‌ನಲ್ಲಿ ಭಾನುವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಸ್ಮಾರ್ಟ್ ಬಜಾರ್ ಕಟ್ಟಡದ ಮುಖ್ಯ ಜನರೇಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ವಿಷಯ ತಿಳಿದ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಹಾಗೂ ಘಟನೆಯಿಂದ ಉಂಟಾದ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.