




ಡೈಲಿವಾರ್ತೆ:18/ಅ./2026

ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ; ರೂಢಿಗತ ಆರೋಪಿ ಬಂಧನ
17.66 ಗ್ರಾಂ ಮಾದಕ ವಸ್ತು ಸಹಿತ ₹85 ಸಾವಿರ ಮೌಲ್ಯದ ಸೊತ್ತು ವಶ

ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉದ್ಯಾವರದ ಅಂಕುದ್ರು ನಿವಾಸಿ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂದು ಗುರುತಿಸಲಾಗಿದ್ದು, ಆತನಿಂದ ಒಟ್ಟು ₹85 ಸಾವಿರ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.17ರಂದು ರಾತ್ರಿ ಸುಮಾರು 10.30ರ ವೇಳೆಗೆ ಭುಜಂಗ ಪಾರ್ಕ್ ಸಮೀಪ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ, ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾದ ವಿಜಯ್ನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.
ಈ ವೇಳೆ ಆರೋಪಿ ತನ್ನ ಸ್ಕೂಟರ್ನ ಡಿಕ್ಕಿಯಲ್ಲಿ ಮಾದಕ ವಸ್ತುಗಳನ್ನು ಇರಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ 17.66 ಗ್ರಾಂ ತೂಕದ ಎಂಡಿಎಂಎ ಎಂದು ಉಲ್ಲೇಖಿಸಲಾದ ಆಂಫೆಟಮೈನ್/ಮೆಥಾಂಫೆಟಮೈನ್ ಹೊಂದಿರುವ ಒಂಬತ್ತು ಜಿಪ್ ಕವರ್ಗಳು, 2.18 ಗ್ರಾಂ ತೂಕದ ಬಣ್ಣದ ಮಾತ್ರೆ ಹಾಗೂ ಪುಡಿ, ತೂಕದ ಯಂತ್ರ, ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಸೇರಿದಂತೆ ₹85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ವಿಜಯ್ ವಿರುದ್ಧ ಈ ಹಿಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಎನ್ಡಿಪಿಎಸ್ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಸೆ.24ರಂದು ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾಗಿದ್ದ ಈತ ರೂಢಿಗತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 22(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಿಎಸ್ಐ ಭರತೇಶ್ ಕಂಕಣವಾಡಿ, ರತ್ನಾಕರ್ ಕೆ. ಹಾಗೂ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.