




ಡೈಲಿವಾರ್ತೆ:22/ಅ./2026

ಸೌದಿ ಅರೇಬಿಯಾ: ದಮ್ಮಾಮ್ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – ಭಾರತೀಯ ಸೇರಿ ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ

ರಿಯಾದ್: ಸೌದಿ ಅರೇಬಿಯಾದ ದಮ್ಮಾಮ್ನಲ್ಲಿರುವ ಕಿಂಗ್ ಫಹದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬುಧವಾರ ತಡರಾತ್ರಿ ನಡೆದ ಭೀಕರ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ನಡೆಸಲಾದ ದಾಳಿಯಿಂದ ಅಲ್ಲಿನ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಕೆಲವು ವಿಮಾನಗಳನ್ನು ಪರ್ಯಾಯ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ದಾಳಿಯ ಪರಿಣಾಮವಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ವ್ಯತ್ಯಯ ಉಂಟಾಗಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಮೃತಪಟ್ಟವರು ಹಾಗೂ ಗಾಯಗೊಂಡವರ ಕುಟುಂಬಸ್ಥರನ್ನು ಸಂಪರ್ಕಿಸುವ ಕಾರ್ಯವೂ ನಡೆಯುತ್ತಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ರಾಯಭಾರ ಕಚೇರಿ ಮಾಹಿತಿ ನೀಡಿದೆ.
ಪ್ರಾದೇಶಿಕ ಉದ್ವಿಗ್ನತೆಯ ನಡುವೆ ಆತಂಕ:
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭದ್ರತಾ ಉದ್ವಿಗ್ನತೆಯ ನಡುವೆಯೇ ಈ ದಾಳಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಇರಾನ್ ಬೆಂಬಲಿತ ಯೆಮನ್ನ ಹೌತಿ ಬಂಡುಕೋರರು ಸೌದಿ ಅರೇಬಿಯಾದ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ದಾಳಿಯ ಸ್ವರೂಪ, ನಿಖರ ಕಾರಣ ಹಾಗೂ ಹೊಣೆಗಾರಿಕೆಗೆ ಸಂಬಂಧಿಸಿದ ಅಧಿಕೃತ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.