




ಡೈಲಿವಾರ್ತೆ:22/ಅ./2026

ಅಂಕೋಲಾ: ಶಾರ್ಟ್ ಸರ್ಕ್ಯೂಟ್ನಿಂದ ಶಾಲೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಭಸ್ಮ

ವರದಿ: ವಿದ್ಯಾಧರ ಮೊರಬಾ
ಅಂಕೋಲಾ: ತಾಲೂಕಿನ ಬೊಬ್ರುವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಂಕಣಕೇರಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೊಳಗಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ಶಾಲೆಯ ಕೊಠಡಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ವ್ಯಾಪಿಸಿ ಕೊಠಡಿಯಲ್ಲಿದ್ದ ಪೀಠೋಪಕರಣಗಳು ಹಾಗೂ ವಿವಿಧ ಶೈಕ್ಷಣಿಕ ಸಾಮಗ್ರಿಗಳಿಗೆ ಹಾನಿಯಾಗಿದೆ. ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಸ್ಮಾರ್ಟ್ ಟಿವಿ ಸೇರಿದಂತೆ ಶಾಲೆಯ ಪ್ರಮುಖ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಶೈಕ್ಷಣಿಕ ಸಾಮಗ್ರಿಗಳಿಗೆ ಭಾರೀ ಹಾನಿ ಉಂಟಾಗಿದ್ದು, ಶಾಲೆಯ ಆಸ್ತಿಪಾಸ್ತಿಗೆ ನಷ್ಟ ಸಂಭವಿಸಿದೆ.
ಘಟನೆಯ ಹಿನ್ನೆಲೆಯಲ್ಲಿ ಶಾಸಕ ಸತೀಶ ಸೈಲ್ ಅವರು ಗುರುವಾರ ಶಾಲೆಗೆ ಭೇಟಿ ನೀಡಿ, ಅಗ್ನಿ ಅವಘಡ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಯ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ, ಶಾಲೆಯ ಮುಖ್ಯಾಧ್ಯಾಪಕ ಅರುಣ ಎಸ್. ಶೇಡಗೇರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ (ಎಸ್ಡಿಎಂಸಿ) ಅಧ್ಯಕ್ಷರು ಹಾಗೂ ಸದಸ್ಯರು ಭಾಗಿಯಾಗಿದ್ದರು.