




ಡೈಲಿವಾರ್ತೆ:26/ಅ./2026

ಮೋದಿ ಕುರಿತ ಖರ್ಗೆ ಹೇಳಿಕೆಗೆ ಬಿಜೆಪಿ ಆಕ್ರೋಶ: ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖರ್ಗೆ ಅವರು ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ದೇಶದ ಜನರ ಮುಂದೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಬಳಿಕ ವಿಧಾನಸೌಧದತ್ತ ಮೆರವಣಿಗೆ ಮೂಲಕ ತೆರಳಿ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಪೊಲೀಸರು ಬ್ಯಾರಿಕೇಡ್ಗಳ ಮೂಲಕ ತಡೆದರು. ಈ ಸಂದರ್ಭದಲ್ಲಿ ಕೆಲ ನಾಯಕರು ಬ್ಯಾರಿಕೇಡ್ಗಳನ್ನು ಹತ್ತಿ ಮುನ್ನಡೆಯಲು ಯತ್ನಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಪೊಲೀಸರು, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಎನ್. ರವಿಕುಮಾರ್, ಸಿ.ಕೆ. ರಾಮಮೂರ್ತಿ, ಡಾ. ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಖರ್ಗೆ ವಿರುದ್ಧ ಅಶೋಕ್ ವಾಗ್ದಾಳಿ:
ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಖರ್ಗೆ ಅವರಿಗೆ ಅರಳುಮರುಳು ಶುರುವಾಗಿದೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಲು ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ಅವರೇ ಸಾಕು ಎಂದು ವ್ಯಂಗ್ಯವಾಡಿದರು.
ಈ ವಯಸ್ಸಿನಲ್ಲಿ ದೇವರ ಜಪ ಮಾಡಿಕೊಂಡು ಇರಬೇಕಿತ್ತು. ಆದರೆ ಪ್ರತಿದಿನ ಪ್ರಧಾನಿ ಮೋದಿ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಖರ್ಗೆ ಅವರ ಹೇಳಿಕೆಗಳು ಕಾಂಗ್ರೆಸ್ನ ಹೀನ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅಶೋಕ್ ಆರೋಪಿಸಿದರು. ಖರ್ಗೆ ಅವರ ಹೇಳಿಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ ಎಂಬ ಧಾಟಿಯಲ್ಲಿ ಕಿಡಿಕಾರಿದರು.
ಖರ್ಗೆ ಹೇಳಿಕೆ ರಾಜಕೀಯ ಶಿಷ್ಟಾಚಾರದ ಉಲ್ಲಂಘನೆ: ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆ ಅವಹೇಳನಕಾರಿಯಾಗಿದ್ದು, ರಾಜಕೀಯ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಖರ್ಗೆ ಅವರು ತಮ್ಮ ಮಾತುಗಳಲ್ಲಿ ಸಂಯಮ ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟ ಕುಮಾರಸ್ವಾಮಿ, ಪ್ರಧಾನಿಯವರ ಕುಟುಂಬವನ್ನು ರಾಜಕೀಯ ಚರ್ಚೆಗೆ ಎಳೆದು ತರುವುದು ಸರಿಯಲ್ಲ ಎಂಬ ಆಕ್ಷೇಪ ವ್ಯಕ್ತಪಡಿಸಿದರು.
ಖರ್ಗೆ ಅವರ ಹೇಳಿಕೆ ಕ್ಷಮಾರ್ಹವಲ್ಲ ಎಂದು ಟೀಕಿಸಿದ ಅವರು, ಈ ರೀತಿಯ ಹೇಳಿಕೆಗಳು ರಾಜಕೀಯ ವಲಯದಲ್ಲಿ ಅನಗತ್ಯ ವಿವಾದಗಳಿಗೆ ಕಾರಣವಾಗುತ್ತವೆ ಎಂದರು. ಕಾಂಗ್ರೆಸ್ ಪಕ್ಷದ ರಾಜಕೀಯ ನಡವಳಿಕೆಯ ಬಗ್ಗೆಯೂ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಕುರಿತ ಖರ್ಗೆ ಅವರ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಪಟ್ಟು ಹಿಡಿದಿದ್ದಾರೆ. ಈ ಬೆಳವಣಿಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ.