ಡೈಲಿವಾರ್ತೆ:31/ಅ./2026

ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲೇ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರದೀಪ್ ಪೂಜಾರಿ ಆತ್ಮಹತ್ಯೆ! ಹಲ್ಲೆ ಆರೋಪ, ದೂರು ಸ್ವೀಕಾರದ ಬಗ್ಗೆ ವಿವಾದ

ಉಡುಪಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರೊಂದಿಗೆ ನಡೆದ ಗಲಾಟೆ ಹಾಗೂ ಹಲ್ಲೆಯ ಆರೋಪದ ಬೆನ್ನಲ್ಲೇ, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪ್ರದೀಪ್ ಪೂಜಾರಿ (28) ಆಸ್ಪತ್ರೆಯ ಶೌಚಾಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಘಟನೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆಯೂ ಚರ್ಚೆಗೆ ಕಾರಣವಾಗಿದೆ.

ಹಿಂದೂಪರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಮೃತ ಪ್ರದೀಪ್ ಪೂಜಾರಿ (28) ಅವರು ಪೆರ್ಡೂರು ಸಮೀಪದ ಪಾಡಿಗಾರ್ ಮೂಲದವರಾಗಿದ್ದು, ಕಳೆದ 7 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಕ್ಟೋಬರ್ 27ರಂದು ಯುವತಿಯ ಮನೆಗೆ ತೆರಳಿದ್ದ ಪ್ರದೀಪ್, ಅಲ್ಲಿ ಗಲಾಟೆ ನಡೆಸಿ ಯುವತಿ ಹಾಗೂ ಆಕೆಯ ತಾಯಿಯ ಮೇಲೆ ಮೆಣಸಿನ ಪುಡಿ ಎರಚಿ ದಾಳಿ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಮನೆಯವರ ಕೂಗಾಟ ಕೇಳಿ ಸ್ಥಳಕ್ಕೆ ಬಂದ ನೆರೆಹೊರೆಯವರು ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯ ಬಳಿಕ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದ ಪ್ರದೀಪ್, ಈ ಕುರಿತು ವಿಡಿಯೋ ಸಹಿತ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ. ಮತ್ತೊಂದೆಡೆ, ಪ್ರದೀಪ್ ವಿರುದ್ಧ ಯುವತಿಯ ಮನೆಯವರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೀಪ್ ಬಂಧನಕ್ಕೊಳಗಾಗಿ ಬಳಿಕ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.

ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಅಕ್ಟೋಬರ್ 27ರಂದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಸಂಜೆ ಆಸ್ಪತ್ರೆಯ ಶೌಚಾಲಯಕ್ಕೆ ತೆರಳಿದ ಅವರು, ತಾವು ಧರಿಸಿದ್ದ ಚಡ್ಡಿಯ ಲಾಡಿಯನ್ನು ಬಳಸಿ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿಗಾಕ್ಕಾಗಿ ಇಬ್ಬರು ಪೊಲೀಸರ ನಿಯೋಜನೆ:
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರದೀಪ್ ಅವರ ಮೇಲೆ ನಿಗಾ ವಹಿಸಲು ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು ಎನ್ನಲಾಗಿದೆ. ಆದರೂ ಆಸ್ಪತ್ರೆಯ ಶೌಚಾಲಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಭದ್ರತಾ ವ್ಯವಸ್ಥೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆತ್ಮಹತ್ಯೆಗೂ ಮುನ್ನ ತಮ್ಮ ಮೇಲಿನ ಹಲ್ಲೆಗೆ ಸಂಬಂಧಿಸಿದ ದೂರು ದಾಖಲಾಗಿದೆಯೇ ಎಂಬುದನ್ನು ತಿಳಿದುಕೊಳ್ಳಲು ಪ್ರದೀಪ್ ಹಲವು ಬಾರಿ ಹಿರಿಯಡಕ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದರು ಎನ್ನಲಾಗಿದೆ.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಸಮಾಧಾನ:
ಪ್ರದೀಪ್ ಪೂಜಾರಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೂಡ ಆಸ್ಪತ್ರೆಗೆ ತೆರಳಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರೊಂದಿಗೆ ಮಾತುಕತೆ ನಡೆಸಿದರು.
ಪ್ರದೀಪ್ ತಮ್ಮ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದ್ದರೂ, ಹಿರಿಯಡ್ಕ ಪೊಲೀಸರು ಅದನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪದ ಬಗ್ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಪ್ರದೀಪ್ ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾಗಿ ಕಾರಣವೇನು, ಹಲ್ಲೆಯ ದೂರಿನ ವಿಚಾರದಲ್ಲಿ ಪೊಲೀಸ್ ಠಾಣೆಯಲ್ಲಿ ಏನು ನಡೆದಿದೆ ಹಾಗೂ ಆಸ್ಪತ್ರೆಯಲ್ಲಿ ನಿಗಾ ಇದ್ದರೂ ಈ ಘಟನೆ ಹೇಗೆ ಸಂಭವಿಸಿತು ಎಂಬ ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ. ಘಟನೆಯ ಎಲ್ಲ ಆಯಾಮಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.