


ಡೈಲಿವಾರ್ತೆ: 02/ನ./2026




ದೀಪಾವಳಿಗೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮತ್ತು ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಪಟಾಕಿ ಸಿಡಿಸಲು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ಸಮಯವನ್ನು ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ನ್ಯಾಯಾಲಯಗಳ ಆದೇಶಗಳಿಗೆ ಅನುಗುಣವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳ ಬಳಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಅವುಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಯಾವುದೇ ಲೋಪವಿಲ್ಲದೆ ಪಾಲಿಸಬೇಕು ಎಂದು ಸೂಚಿಸಿದರು. ಪಟಾಕಿಗಳ ಸಂಗ್ರಹಣೆ ಮತ್ತು ಮಾರಾಟದ ವೇಳೆ ಸಂಭವಿಸಬಹುದಾದ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿರುವ ಪಟಾಕಿ ಗೋದಾಮುಗಳನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಪಟಾಕಿಗಳಲ್ಲಿ ವಿವಿಧ ಬಣ್ಣಗಳನ್ನು ಹೊರಹೊಮ್ಮಿಸಲು ಹಲವು ಬಗೆಯ ಲೋಹಗಳನ್ನು ಬಳಸಲಾಗುತ್ತಿದ್ದು, ಅವುಗಳ ಸಿಡಿತದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಅಲ್ಲದೆ, ಅತಿಯಾದ ಶಬ್ದ ಹೊರಡಿಸುವ ಪಟಾಕಿಗಳ ಬಳಕೆಯಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಚಿವರು ತಿಳಿಸಿದರು.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಕಾರ್ಯಪಡೆಗಳನ್ನು ರಚಿಸಿ, ತಮ್ಮ ವ್ಯಾಪ್ತಿಯಲ್ಲಿರುವ ಪಟಾಕಿ ಗೋದಾಮುಗಳ ತಪಾಸಣೆ ನಡೆಸಬೇಕು. ನಿಯಮಬಾಹಿರವಾಗಿ ಹಸಿರು ಪಟಾಕಿಗಳನ್ನು ಹೊರತುಪಡಿಸಿದ ಇತರ ಪಟಾಕಿಗಳನ್ನು ಸಂಗ್ರಹಿಸಿರುವುದು ಕಂಡುಬಂದಲ್ಲಿ, ಸಂಬಂಧಪಟ್ಟ ನಿಯಮಗಳು ಮತ್ತು ನ್ಯಾಯಾಲಯದ ನಿರ್ದೇಶನಗಳ ಅನ್ವಯ ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಇತರ ನಿಷೇಧಿತ ಪ್ರದೇಶಗಳ ಸುತ್ತಮುತ್ತ ಪಟಾಕಿ ಸಿಡಿಸುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಈ ನಿಯಮಗಳ ಉಲ್ಲಂಘನೆಯಾಗದಂತೆ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆ ನಿಗಾ ವಹಿಸಬೇಕು. ಸಾರ್ವಜನಿಕರ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ನಿಯಮಗಳ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಸಚಿವರು ಹೇಳಿದರು.
ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಮತ್ತು ಮಾಲ್ಗಳಲ್ಲಿ ಕರಪತ್ರಗಳನ್ನು ವಿತರಿಸುವುದರ ಜೊತೆಗೆ, ವಿಡಿಯೋ ಮತ್ತು ಆಡಿಯೋ ಸಂದೇಶಗಳ ಮೂಲಕ ಜಾಗೃತಿ ಅಭಿಯಾನ ನಡೆಸಲು ಸೂಚಿಸಲಾಗಿದೆ. ಪಟಾಕಿಗಳ ಬಳಕೆಯಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ, ದೀಪಾವಳಿ ಸಂದರ್ಭದಲ್ಲಿ ಹೆಚ್ಚಾಗಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

