ಡೈಲಿವಾರ್ತೆ: 05/ನ./2026

ಜ್ಞಾನೇಶ್ ಕುಮಾರ್ ವಜಾ, SIR ಪ್ರಕ್ರಿಯೆ ರದ್ದತಿಗೆ ಆಗ್ರಹ: ನಾಳೆ (ನ. 6) ರಂದು ಚೊಕ್ಕಬೆಟ್ಟುವಿನಲ್ಲಿ SDPI ಯಿಂದ ‘ಜಂತರ್ ಮಂತರ್’ ಧರಣಿ

ಸುರತ್ಕಲ್, ನ.5: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ವಜಾಗೊಳಿಸಬೇಕು ಹಾಗೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನ.6ರಂದು ಚೊಕ್ಕಬೆಟ್ಟು ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.

ನಾಳೆ ಸಂಜೆ 4ರಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿರುವ ಈ ಪ್ರತಿಭಟನೆಯನ್ನು ‘ಜಂತರ್ ಮಂತರ್ ಧರಣಿ’ ಹೆಸರಿನಲ್ಲಿ ಆಯೋಜಿಸಲಾಗಿದ್ದು, SDPIಯ ಜಿಲ್ಲಾ ಹಾಗೂ ಕ್ಷೇತ್ರ ಮಟ್ಟದ ನಾಯಕರು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ.

SIR ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುವ ಕ್ರಮವಾಗಿದೆ ಎಂದು SDPI ಆರೋಪಿಸಿದೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಬದಲು ಸರ್ಕಾರದ ಪ್ರಭಾವಕ್ಕೆ ಒಳಗಾಗಿ ನಡೆದುಕೊಳ್ಳುತ್ತಿದೆ. ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪಕ್ಷಪಾತದ ಧೋರಣೆಯಿಂದ ಸಾಂವಿಧಾನಿಕ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ಘನತೆಗೆ ಧಕ್ಕೆಯಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮತದಾನದ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಅರ್ಹ ಮತದಾರರನ್ನು ಈ ಹಕ್ಕಿನಿಂದ ವಂಚಿಸಬಾರದು. ಈ ಹಿನ್ನೆಲೆಯಲ್ಲಿ ವಿವಾದಿತ SIR ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸುವುದರ ಜತೆಗೆ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು SDPI ಒತ್ತಾಯಿಸಿದೆ.

ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಂಬಲಿಸುವ ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ಮನವಿ ಮಾಡಿದೆ.