ಡೈಲಿವಾರ್ತೆ: 05/ನ./2026

ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕರವೇ ಆಗ್ರಹ : ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಪ್ರದೀಪ್ ಪೂಜಾರಿ ಅವರ ಸಾವಿನ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ನವೆಂಬರ್ 4ರಂದು ರಜತಾದ್ರಿ, ಮಣಿಪಾಲದಲ್ಲಿ ಬೃಹತ್ ಜನಾಗ್ರಹ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಕರವೇ ಜಿಲ್ಲಾಧ್ಯಕ್ಷ ಅ. ರಾ. ಪ್ರಭಾಕರ ಪೂಜಾರಿ ಅವರ ನೇತೃತ್ವದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಗೆ ಅಡ್ಡಿಪಡಿಸುವ ಪ್ರಯತ್ನಗಳನ್ನು ತಡೆಯಬೇಕು ಹಾಗೂ ಪ್ರಕರಣದ ಕುರಿತು ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರದೀಪ್ ಪೂಜಾರಿ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪ ಎದುರಿಸುತ್ತಿರುವ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸುವ ಬದಲು ವರ್ಗಾವಣೆ ಮಾಡಿರುವ ಕ್ರಮ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ವಿಡಿಯೋ ಮಾಹಿತಿಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಕುರಿತು ಸಮಗ್ರ, ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (CID/COD) ವರ್ಗಾಯಿಸಿ ತನಿಖೆ ನಡೆಸಬೇಕು ಎಂಬುದು ಕರವೇಯ ಪ್ರಮುಖ ಆಗ್ರಹವಾಗಿದೆ.

ನ್ಯಾಯಕ್ಕಾಗಿ ಧ್ವನಿ ಎತ್ತುವ ಹೋರಾಟಗಾರರ ಪ್ರಜಾಪ್ರಭುತ್ವದ ಹಕ್ಕನ್ನು ಹತ್ತಿಕ್ಕುವ ಅಥವಾ ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳನ್ನು ತಡೆಯಬೇಕು. ಪ್ರತಿಭಟನಾಕಾರರಿಗೆ ಸೂಕ್ತ ಅವಕಾಶ ಹಾಗೂ ಅಗತ್ಯ ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಪ್ರದೀಪ್ ಪೂಜಾರಿ ಸಾವಿನ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ಜಿಲ್ಲಾಧ್ಯಕ್ಷ ಅ. ರಾ. ಪ್ರಭಾಕರ ಪೂಜಾರಿ ಅವರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಕುಶಾಲ್ ಅಮೀನ್, ಅಯ್ಯಣ್ಣ ಸಾಬುದ್ದೀನ್, ಮಹಿಳಾ ಜಿಲ್ಲಾಧ್ಯಕ್ಷೆ ಅಶ್ವಿನಿ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ, ಪ್ರಧಾನ ಸಂಚಾಲಕಿ ಜಯಶ್ರೀ ಸುವರ್ಣ, ಸುನಂದಾ ಕೋಟ್ಯಾನ್, ಪವಿತ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.