


ಡೈಲಿವಾರ್ತೆ: 09/ನ./2026




ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು: 6 ಮಂದಿ ಸಜೀವ ದಹನ!

ಲಕ್ನೋ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನವಾಗಿರುವ ಭೀಕರ ಘಟನೆ ಉತ್ತರ ಪ್ರದೇಶದ ಮುಜಫ್ಫರ್ನಗರ ಜಿಲ್ಲೆಯಲ್ಲಿ ನವೆಂಬರ್ 9ರಂದು ಸಂಭವಿಸಿದೆ.
ಮೃತರೆಲ್ಲರೂ ಹರಿಯಾಣದ ಜಿಂದ್ ಜಿಲ್ಲೆಯ ನಿವಾಸಿಗಳಾಗಿದ್ದು, ಜಿಂದ್ನಿಂದ ಹರಿದ್ವಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಜಿಲ್ಲೆಯ ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಜಗಾಹೇಡಿ ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ.
ಪ್ರಯಾಣಿಸುತ್ತಿದ್ದ ಕಾರು ಜಗಾಹೇಡಿ ಗ್ರಾಮದ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ರಭಸವಾಗಿ ಅಪ್ಪಳಿಸಿದೆ. ಡಿಕ್ಕಿಯ ಪರಿಣಾಮ ಕಾರು ರಸ್ತೆಯಲ್ಲೇ ಪಲ್ಟಿಯಾಗಿದ್ದು, ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಇಡೀ ವಾಹನಕ್ಕೆ ಬೆಂಕಿ ವ್ಯಾಪಿಸಿದ್ದರಿಂದ ಕಾರಿನೊಳಗಿದ್ದವರಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ. ಸ್ಥಳೀಯರು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದವರು ರಕ್ಷಣೆಗೆ ಮುಂದಾದರೂ ಬೆಂಕಿಯ ತೀವ್ರತೆಯಿಂದಾಗಿ ಯಾರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಿತಾವಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ತೀವ್ರ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಕಾರಿನೊಳಗೆ ಸಿಲುಕಿದ್ದ ಆರು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆಗೆ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು.
ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್ ಹಾಗೂ ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

