


ಡೈಲಿವಾರ್ತೆ: 12/ನ./2026




ಸಿದ್ದೇಶ್ವರ ಸ್ವಾಮಿ ಜಾತ್ರೆಯಲ್ಲಿ ಕಿಡಿಗೇಡಿಗಳಿಂದ ಕಲ್ಲು ತೂರಾಟ – ಮಗು ಸೇರಿ ನಾಲ್ವರಿಗೆ ಗಾಯ, ರಥೋತ್ಸವ ಅರ್ಧಕ್ಕೆ ಸ್ಥಗಿತ!

ಮೈಸೂರು: ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರಾ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಮಗುವೊಂದು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಜಾತ್ರಾ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. ಬಳಿಕ ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಆನಂದ್, ಭರತ್, ಅಭಿ ಸೇರಿದಂತೆ ಮಗುವಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ತಗಡೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘರ್ಷಣೆಯ ಪರಿಣಾಮ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿಯ ರಥೋತ್ಸವವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸುವಲ್ಲಿ ಲೋಪವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಘಟನೆಯ ಬೆನ್ನಲ್ಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.

