


ಡೈಲಿವಾರ್ತೆ: 12/ನ./2026




ಸುರತ್ಕಲ್: ಬೆಲೆ ಏರಿಕೆ, ಕೆಎಸ್ಆರ್ಟಿಸಿ ಬಸ್ ದರ ಹೆಚ್ಚಳ ಖಂಡಿಸಿ ಎಸ್ಡಿಪಿಐ ಬೃಹತ್ ಪ್ರತಿಭಟನೆ

ಸುರತ್ಕಲ್, ನ.12: ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುರತ್ಕಲ್ ಬ್ಲಾಕ್ ಸಮಿತಿ ವತಿಯಿಂದ ಸುರತ್ಕಲ್ ಜಂಕ್ಷನ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
‘ಗಗನಕ್ಕೇರಿದ ಬೆಲೆ, ಜನಸಾಮಾನ್ಯರಿಗೆ ಹೊರೆ’ ಎಂಬ ಘೋಷವಾಕ್ಯದೊಂದಿಗೆ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು, ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವನ್ನು ಏಕಾಏಕಿ ಹೆಚ್ಚಿಸಿರುವ ಸರ್ಕಾರದ ಕ್ರಮ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರಿದಂತಾಗಿದೆ ಎಂದು ಟೀಕಿಸಿದರು. ಪ್ರತಿನಿತ್ಯ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಉದ್ದೇಶಗಳಿಗೆ ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿರುವ ಬಡವರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ದರ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದೆಡೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಅಡುಗೆ ಅನಿಲ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಕುಟುಂಬಗಳ ಜೀವನ ನಿರ್ವಹಣೆ ದುಸ್ತರವಾಗುತ್ತಿದೆ ಎಂದು ಅವರು ಹೇಳಿದರು.
ಚುನಾವಣೆಯ ಸಂದರ್ಭದಲ್ಲಿ ಹಲವು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸರ್ಕಾರ ಇದೀಗ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ನಿರೀಕ್ಷೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಆಡಳಿತ ವ್ಯವಸ್ಥೆಯಲ್ಲಿರುವವರಿಗೆ ವಿವಿಧ ಸೌಲಭ್ಯಗಳು ದೊರೆಯುತ್ತಿದ್ದರೆ, ಜನಸಾಮಾನ್ಯರು ಮಾತ್ರ ಪ್ರತಿಯೊಂದು ಅಗತ್ಯಕ್ಕೂ ಹೆಚ್ಚಿನ ಹಣ ತೆರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಶ್ರಫ್ ಅಡ್ಡೂರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾಧ್ಯಕ್ಷೆ ಯಾಸ್ಮೀನ್ ಕೃಷ್ಣಾಪುರ, ಹೆಚ್ಚಿಸಿರುವ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವನ್ನು ತಕ್ಷಣವೇ ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಗೆ ಬಸ್ ಪಾಸ್ ದರದಲ್ಲಿ ಹೆಚ್ಚಿನ ರಿಯಾಯಿತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ‘ಬೆಲೆ ಏರಿಕೆ ನಿಲ್ಲಲೇಬೇಕು’, ‘ಬಸ್ ದರ ಇಳಿಯಲೇಬೇಕು’, ‘ಲೂಟಿ ಸರ್ಕಾರಕ್ಕೆ ಧಿಕ್ಕಾರ’ ಹಾಗೂ ‘ಜನವಿರೋಧಿ ಸರ್ಕಾರ ಮನೆಗೆ ಹೋಗಬೇಕು’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಝೀಝ್ ಸುರತ್ಕಲ್, ಸಮಿತಿ ಸದಸ್ಯ ನೂರುಲ್ಲಾ ಕುಳಾಯಿ, ನಿಕಟಪೂರ್ವ ಕಾರ್ಪೊರೇಟರ್ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಶಂಶಾದ್ ಅಬೂಬಕ್ಕರ್, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರದ ಅಧ್ಯಕ್ಷೆ ಸಾಹಿನಾ ಸುರತ್ಕಲ್, ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸಲಾಂ ಕಾನ, ಕಾರ್ಯದರ್ಶಿ ಹಫೀರ್ ಚೊಕ್ಕಬೆಟ್ಟು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

