ಡೈಲಿವಾರ್ತೆ: 12/ನ./2026

ಮುಂಡಗೋಡ ಬಂದ್‌ಗೆ ವ್ಯಾಪಕ ಬೆಂಬಲ: ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಸಾವಿರಾರು ಜನರಿಂದ ಬೃಹತ್ ಪ್ರತಿಭಟನೆ

ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ 65 ವರ್ಷದ ವ್ಯಕ್ತಿಯೊಬ್ಬ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಮುಂಡಗೋಡ ಬಂದ್‌ಗೆ ಪಟ್ಟಣದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ವ್ಯಾಪಾರಸ್ಥರು ಪಕ್ಷಭೇದ ಮರೆತು ಬಂದ್‌ಗೆ ಸ್ವಯಂಪ್ರೇರಿತವಾಗಿ ಕೈಜೋಡಿಸಿದರು. ಪಟ್ಟಣದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಸೇರಿದಂತೆ ಬಹುತೇಕ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದರಿಂದ ಜನನಿಬಿಡ ಪ್ರದೇಶಗಳು ಜನಸಂಚಾರ ಹಾಗೂ ವ್ಯಾಪಾರ ಚಟುವಟಿಕೆಗಳಿಲ್ಲದೆ ಸ್ತಬ್ಧಗೊಂಡಿದ್ದವು.

ಸಾವಿರಾರು ಜನರಿಂದ ಪ್ರತಿಭಟನಾ ಮೆರವಣಿಗೆ:
ಗುರುವಾರ ಬೆಳಗ್ಗೆ 10 ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಸಮಾವೇಶಗೊಂಡರು. ಬಳಿಕ ಅಲ್ಲಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ಪ್ರಕರಣದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರು, ವಿದ್ಯಾರ್ಥಿನಿಯರು, ನ್ಯಾಯವಾದಿಗಳು, ನಿವೃತ್ತ ಸೈನಿಕರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾಕಾರರು ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕು ಹಾಗೂ ಆರೋಪಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಕಾನೂನು ಶಿಕ್ಷೆ ವಿಧಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.

ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಬಾಲಕಿಯ ಮೇಲಿನ ಕೃತ್ಯವನ್ನು ಖಂಡಿಸಿದರು. ಇಂತಹ ಅಮಾನವೀಯ ಕೃತ್ಯಗಳು ಮರುಕಳಿಸದಂತೆ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ತೆಗೆ ಶೀಘ್ರ ನ್ಯಾಯ ದೊರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಾಲಕಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಎಸ್‌ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ:
ಬಂದ್ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಸ್ಥಳದಲ್ಲೇ ಹಾಜರಿದ್ದು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಮುಖ ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬ ಒಕ್ಕೊರಲಿನ ಆಗ್ರಹದೊಂದಿಗೆ ನಡೆದ ಬಂದ್‌ಗೆ ಪಕ್ಷಾತೀತವಾಗಿ ಸಾರ್ವಜನಿಕರಿಂದ ದೊರೆತ ವ್ಯಾಪಕ ಬೆಂಬಲ ಮುಂಡಗೋಡದಲ್ಲಿ ಗಮನ ಸೆಳೆಯಿತು.