ಡೈಲಿವಾರ್ತೆ: 13/ನ./2026

ಚಿಕ್ಕಬಳ್ಳಾಪುರ: ಕಾಲು ಜಾರಿ ಬಿದ್ದು ಶಾಸಕ ಪ್ರದೀಪ್ ಈಶ್ವರ್‌ಗೆ ಗಂಭೀರ ಗಾಯ – 6 ವಾರ ವಿಶ್ರಾಂತಿಗೆ ವೈದ್ಯರ ಸೂಚನೆ

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ವೈದ್ಯರು 6 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.

ಈ ಕುರಿತು ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕಾಲಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಬ್ಯಾಂಡೇಜ್ ಹಾಕಿಸಿಕೊಂಡಿರುವ ಅವರು, ವಿಶ್ರಾಂತಿಯಲ್ಲಿದ್ದರೂ ತಮ್ಮ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿಗಳಿಂದ ದೂರ ಉಳಿಯಲು ನಿರಾಕರಿಸಿದ್ದಾರೆ.

ಶಾಲೆಯ ತರಗತಿ ಕೊಠಡಿಯಲ್ಲೇ ಬೆಡ್ ವ್ಯವಸ್ಥೆ ಮಾಡಿಕೊಂಡಿರುವ ಪ್ರದೀಪ್ ಈಶ್ವರ್, ಅಲ್ಲಿಯೇ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಶಿಕ್ಷಕನಾಗಿ ಹಾಗೂ ಆಡಳಿತಗಾರನಾಗಿ ಕಾರ್ಯನಿರ್ವಹಿಸುತ್ತಿರುವ ತಮಗೆ ಸುಮ್ಮನೆ ಕುಳಿತುಕೊಳ್ಳುವುದು ಸಾಧ್ಯವಿಲ್ಲ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಗಾಯದ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರೂ, ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ಮುಂದುವರಿಸಿರುವ ಶಾಸಕರ ನಡೆ ಇದೀಗ ಗಮನ ಸೆಳೆದಿದೆ.