ಡೈಲಿವಾರ್ತೆ: 16/ನ./2026

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ: ನವಚಂಡಿಕಾಯಾಗದಲ್ಲಿ ಭಾಗಿ

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಮುಂಜಾನೆ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪತ್ನಿ ಹಾಗೂ ಮಗ ಮತ್ತು ಸೊಸೆಯೊಂದಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಾಲಯದಲ್ಲಿ ನಡೆಯುತ್ತಿರುವ ನವಚಂಡಿಕಾಯಾಗದ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಅರ್ಚಕರ ನೇತೃತ್ವದಲ್ಲಿ ನಡೆದ ಸಂಕಲ್ಪ ವಿಧಿಯಲ್ಲಿಯೂ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸುಮಾರು ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡಿದ್ದ ಹರಕೆಯ ಹಿನ್ನೆಲೆಯಲ್ಲಿ ಹಾಗೂ ದೋಷ ಪರಿಹಾರಾರ್ಥವಾಗಿ ನವಚಂಡಿಕಾಯಾಗವನ್ನು ನೆರವೇರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೊಲ್ಲೂರು ದೇವಸ್ಥಾನದ ಭೇಟಿಯ ಬಳಿಕ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:30ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯತ್ತ ತಮ್ಮ ಪ್ರವಾಸವನ್ನು ಮುಂದುವರಿಸಲಿದ್ದಾರೆ.