


ಡೈಲಿವಾರ್ತೆ: 16/ನ./2026




ಸಾಲಿಗ್ರಾಮ: ಟಯರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಕಿಯಾ ಕಾರು – ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಪಲ್ಟಿ

ಕೋಟ: ಚಲಿಸುತ್ತಿದ್ದ ಕಿಯಾ ಕಾರಿನ ಟಯರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮದ ನರ್ತಕಿ ಬಾರ್ ಸಮೀಪ ಸೋಮವಾರ ಮದ್ಯಾಹ್ನ ಸಂಭವಿಸಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಿಯಾ ಕಾರು ಸಾಲಿಗ್ರಾಮ ಸಮೀಪಿಸುತ್ತಿದ್ದಂತೆ ಏಕಾಏಕಿ ಟಯರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್ ಮೇಲಿದ್ದ ಎರಡು ವಿದ್ಯುತ್ ಕಂಬಗಳಿಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ.
ಕಾರಿನಲ್ಲಿ ಚಾಲಕನೊಬ್ಬರೇ ಇದ್ದು, ಅಪಘಾತದ ತೀವ್ರತೆಗೆ ಕಾರು ಪಲ್ಟಿಯಾದರೂ ತಕ್ಷಣ ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಅಪಘಾತದ ಪರಿಣಾಮ ಎರಡು ವಿದ್ಯುತ್ ಕಂಬಗಳು ತುಂಡಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೋಟ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

