


ಡೈಲಿವಾರ್ತೆ: 16/ನ./2026




ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಂಭ್ರಮ:
ಸಹಕಾರಿ ಸಂಸ್ಥೆಗಳು ಲಾಭಕ್ಕಿಂತ ಸೇವೆಗೆ ಆದ್ಯತೆ ನೀಡಲಿ: ಪ್ರಕಾಶ್ಚಂದ್ರ ಶೆಟ್ಟಿ

ಕೋಟ: ಸಹಕಾರಿ ಸಂಸ್ಥೆಗಳು ಕೇವಲ ಲಾಭ ಗಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸದೆ, ರೈತರು ಹಾಗೂ ಜನಸಾಮಾನ್ಯರ ಸೇವೆಗೆ ಆದ್ಯತೆ ನೀಡಬೇಕು. ಜನರ ವಿಶ್ವಾಸ, ಪಾರದರ್ಶಕ ಆಡಳಿತ ಮತ್ತು ಸೇವಾ ಮನೋಭಾವವೇ ಸಹಕಾರಿ ಕ್ಷೇತ್ರದ ನಿಜವಾದ ಶಕ್ತಿಯಾಗಿದೆ ಎಂದು ಉಪ್ಪುಂದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘ (ನಿ.), ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ.16ರಂದು ಕೋಟದ ಬಿ.ಸಿ. ಹೊಳ್ಳ ಸಹಕಾರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಉಡುಪಿ ಜಿಲ್ಲೆಯಲ್ಲಿ 735 ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ಸುಮಾರು 55 ಸಾವಿರ ರೈತರು ಹಾಲು ಪೂರೈಸುತ್ತಿದ್ದು, ವಾರ್ಷಿಕವಾಗಿ ಸುಮಾರು 750 ಕೋಟಿ ರೂ. ಹಣ ರೈತರಿಗೆ ಪಾವತಿಯಾಗುತ್ತಿದೆ. ಇದು ಗ್ರಾಮೀಣ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದರು.
ಸಹಕಾರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಉತ್ತಮ ಕಾರ್ಯಗಳಿಗೆ ಮಾಧ್ಯಮಗಳಲ್ಲಿ ನಿರೀಕ್ಷಿತ ಪ್ರಚಾರ ದೊರೆಯುತ್ತಿಲ್ಲ. ಅಪರಾಧ ಮತ್ತು ವಿವಾದಗಳಿಗೆ ಸಿಗುವ ಪ್ರಚಾರದಂತೆಯೇ ಸಹಕಾರಿ ಸಂಸ್ಥೆಗಳ ಜನಪರ ಸಾಧನೆಗಳಿಗೂ ಪ್ರಚಾರ ದೊರೆಯಬೇಕು. ಸಂಸ್ಥೆಗಳು ಸ್ಥಳೀಯ ಸಂಘ-ಸಂಸ್ಥೆಗಳೊಂದಿಗೆ ಕೈಜೋಡಿಸಿ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆಡಳಿತ ಮಂಡಳಿ ಸದಸ್ಯರು ಹಾಗೂ ನೌಕರರು ಅಧಿಕಾರ ಮತ್ತು ಸ್ಥಾನಮಾನಕ್ಕೆ ಮಹತ್ವ ನೀಡದೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಸಂಸ್ಥೆಗಳ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಅಭಿವೃದ್ಧಿಗೆ ಶ್ರಮಿಸಬೇಕು. ಸಹಕಾರಿ ತತ್ವಗಳು, ನಿಯಮಗಳು, ಲೆಕ್ಕಪತ್ರ ನಿರ್ವಹಣೆ ಹಾಗೂ ಆಧುನಿಕ ಆಡಳಿತ ವ್ಯವಸ್ಥೆಗಳ ಕುರಿತು ನಿರಂತರ ತರಬೇತಿ ನೀಡುವುದು ಅಗತ್ಯ ಎಂದು ಹೇಳಿದರು. ಸೇವೆ, ವಿಶ್ವಾಸ, ಪಾರದರ್ಶಕತೆ ಮತ್ತು ಜವಾಬ್ದಾರಿಯುತ ಆಡಳಿತವನ್ನು ಅಳವಡಿಸಿಕೊಂಡಾಗ ಮಾತ್ರ ಸಹಕಾರಿ ಸಂಸ್ಥೆಗಳು ಮತ್ತಷ್ಟು ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರಲು ಸಾಧ್ಯವಿದ್ದು, ಯುವಜನತೆ ಸಹಕಾರಿ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಹಕಾರಿ ಕ್ಷೇತ್ರವು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಸೇವೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸಹಕಾರಿ ಸಂಸ್ಥೆಗಳು ಇಂದು ವಾಣಿಜ್ಯ ಮತ್ತು ಖಾಸಗಿ ಬ್ಯಾಂಕ್ಗಳಿಗೆ ಪ್ರಬಲ ಸ್ಪರ್ಧೆ ನೀಡುವ ಮಟ್ಟಕ್ಕೆ ಬೆಳೆದಿವೆ. ಜನಸಾಮಾನ್ಯರಿಗೆ ಆರ್ಥಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ ಎಂದರು.
ಸಹಕಾರಿ ಸಂಸ್ಥೆಗಳು ಲಾಭದ ಉದ್ದೇಶಕ್ಕಷ್ಟೇ ಸೀಮಿತವಾಗದೆ ರೈತರ ಕಲ್ಯಾಣ, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವೆಗಳಿಗೆ ಆದ್ಯತೆ ನೀಡಬೇಕು. ಕಾಲಕ್ಕೆ ತಕ್ಕಂತೆ ಬದಲಾಗುತ್ತಿರುವ ತಂತ್ರಜ್ಞಾನ ಹಾಗೂ ಆಡಳಿತ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರಿ ಕ್ಷೇತ್ರಕ್ಕೆ ಕಲ್ಪಿಸುತ್ತಿರುವ ಹೊಸ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ವೆ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ನಿರ್ದೇಶಕ ಟಿ. ಮಂಜುನಾಥ್ ಸ್ವಾಗತಿಸಿ ಪ್ರಸ್ತಾವನೆಗೈದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ. ಸುಧೀರ್ ಕುಮಾರ್, ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೆ. ಶಿವಮೂರ್ತಿ, ಸಂಘದ ನಿರ್ದೇಶಕರಾದ ರವೀಂದ್ರ ಕಾಮತ್, ಕೆ. ಉದಯ್ ಕುಮಾರ್ ಶೆಟ್ಟಿ, ಮಹೇಶ್ ಶೆಟ್ಟಿ, ರಾಘವೇಂದ್ರ ಮಧ್ಯಸ್ಥ, ರಂಜಿತ್ ಕುಮಾರ್, ಜಿ. ಅಜಿತ್ ದೇವಾಡಿಗ, ಚಂದ್ರ ಪೂಜಾರಿ ಪಿ., ವಸಂತಿ ಪೂಜಾರ್ತಿ, ಪ್ರೇಮ, ರಶ್ಮಿತಾ, ದಿನಕರ ಶೆಟ್ಟಿ, ಪಿ. ಶೇಖರ ಮರಕಾಲ ಹಾಗೂ ಕೆ. ರಾಜಾರಾಮ್ ಶೆಟ್ಟಿ ಹಾಗೂ ಸಂಘದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುಜಾತ ಬಾಯಿರಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವಂದಿಸಿದರು. ಶ್ರೀಮತಿ ನಿಶಾ ಪ್ರಾರ್ಥಿಸಿದರು.

