ಡೈಲಿವಾರ್ತೆ: 16/ನ./2026

ಶಂಕರ್ ಎ. ಕುಂದರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನ ಆಗ್ರಹ

ಕೋಟ: ಉಡುಪಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕೆಪಿಸಿಸಿ ಸದಸ್ಯರಾದ ಶಂಕರ್ ಎ. ಕುಂದರ್ ಅವರಿಗೆ ರಾಜ್ಯಮಟ್ಟದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

ನ.16 ರಂದು ಸೋಮವಾರ ಮಧ್ಯಾಹ್ನ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಸಂಘಟನೆಯಲ್ಲಿ ಹಲವು ದಶಕಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡು, ಪಕ್ಷದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಶಂಕರ್ ಎ. ಕುಂದರ್ ಅವರಿಗೆ ಸೂಕ್ತ ರಾಜಕೀಯ ಸ್ಥಾನಮಾನ ಕಲ್ಪಿಸುವುದು ಪಕ್ಷದ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಪಕ್ಷದ ಸಂಘಟನಾ ಚಟುವಟಿಕೆಗಳು, ರಾಜಕೀಯ ಹೋರಾಟಗಳು ಹಾಗೂ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯದಲ್ಲಿ ದೀರ್ಘಕಾಲದಿಂದ ತೊಡಗಿಸಿಕೊಂಡಿರುವ ಅವರು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಇಂತಹ ಅನುಭವಿ ಹಾಗೂ ಪಕ್ಷನಿಷ್ಠ ನಾಯಕರ ಸೇವೆಯನ್ನು ಗುರುತಿಸಿ, ರಾಜ್ಯ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರ ರಾಜಕೀಯ ಕೊಡುಗೆಗೆ ಸೂಕ್ತ ಮನ್ನಣೆ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಿವಿಧ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಶಂಕರ್ ಎ. ಕುಂದರ್ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಹಿರಿಯ ನಾಯಕರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಮೂಲಕ ಕಾರ್ಯಕರ್ತರ ಶ್ರಮ ಮತ್ತು ಸೇವೆಗೆ ಗೌರವ ನೀಡಬೇಕು ಎಂಬ ಒಕ್ಕೊರಲಿನ ಸಂದೇಶವನ್ನು ಈ ಒತ್ತಾಯದ ಮೂಲಕ ಪಕ್ಷದ ವರಿಷ್ಠರಿಗೆ ರವಾನಿಸಲಾಯಿತು.