


ಡೈಲಿವಾರ್ತೆ: 17/ನ./2026




ಮರಕ್ಕೆ ಕಾರು ಡಿಕ್ಕಿ – ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ರಾಮನಗರ: ವೇಗವಾಗಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಸಮೀಪ ಸಂಭವಿಸಿದೆ.
ಮೃತರನ್ನು ಗಾನವಿ (20) ಹಾಗೂ ವೈಷ್ಣವಿ (20) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಣಿಗಲ್ನಲ್ಲಿ ನಡೆಯಲಿದ್ದ ಆ್ಯಕ್ಟಿವಿಟಿ ಕ್ಲಾಸ್ನಲ್ಲಿ ಪಾಲ್ಗೊಳ್ಳಲು ಇಬ್ಬರು ಯುವಕರು ಹಾಗೂ ನಾಲ್ವರು ಯುವತಿಯರು ಸೇರಿದಂತೆ ಆರು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಅಪ್ಪಳಿಸಿದೆ.
ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹಾಗೂ ಇನ್ನಿಬ್ಬರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕನಿಗೆ ನಿದ್ದೆ ಮಂಪರು ಆವರಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಹಾಗೂ ಗಾಯಾಳುಗಳ ಸಂಪೂರ್ಣ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

