


ಡೈಲಿವಾರ್ತೆ: 17/ನ./2026




ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ ಭೇದಿಸಿದ ಪೊಲೀಸರು – ಮೂವರು ಆರೋಪಿಗಳ ಬಂಧನ

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಮುಲ್ಕಾಜೆಮಾಡ ಎಂಬಲ್ಲಿ ವ್ಯಕ್ತಿಯೊಬ್ಬರ ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆಗೈದ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಭೇದಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಹರೇಕಳದ ಶಾಕೀರ್ ಎಂದು ಗುರುತಿಸಲಾಗಿದೆ.
ಮಂಗಳೂರು ಹೊರವಲಯದ ಕಣ್ಣೂರಿನಲ್ಲಿರುವ ಸಿಮೆಂಟ್ ಮತ್ತು ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಯ್ಯದ್ದಿ (40) ಅವರು ಸಂಸ್ಥೆಯ ವ್ಯವಹಾರಕ್ಕೆ ಸಂಬಂಧಿಸಿದಂತೆ ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸುವ ಜವಾಬ್ದಾರಿ ಹೊಂದಿದ್ದರು. ಅದರಂತೆ ಆಗಸ್ಟ್ 20ರಂದು ಹಲವು ಅಂಗಡಿಗಳಿಂದ ನಗದು ಸಂಗ್ರಹಿಸಿ, ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ನಲ್ಲಿ ಹಿಂದಿರುಗುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಮುಲ್ಕಾಜೆಮಾಡ ಎಂಬಲ್ಲಿ ದರೋಡೆಕೋರರು ದಾಳಿ ನಡೆಸಿದ್ದರು.
ಎರಡು ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಅಪರಿಚಿತರು ಮಯ್ಯದ್ದಿ ಅವರ ಬೈಕ್ಗೆ ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಕೆ ಹಾಕಿದ್ದರು. ಬಳಿಕ ಅವರ ಬಳಿಯಿದ್ದ ₹8.35 ಲಕ್ಷ ನಗದು ಹಣವನ್ನು ಬಲವಂತವಾಗಿ ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಈ ಕುರಿತು ಮಯ್ಯದ್ದಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆ ಕೈಗೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸೀತಾರಾಮ ಪಿ. ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ನವೆಂಬರ್ 11ರಂದು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆರೋಪಿಗಳಿಂದ ₹2.01 ಲಕ್ಷ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತರ ಪೈಕಿ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

