ಡೈಲಿವಾರ್ತೆ: 18/ನ./2026

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಕಪ್ಪು ಚಿರತೆ ಸಾವು!

ಯಲ್ಲಾಪುರ: ರಸ್ತೆ ದಾಟುತ್ತಿದ್ದ ಕಪ್ಪು ಚಿರತೆಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡ ಕ್ರಾಸ್ ಸಮೀಪ ಸಂಭವಿಸಿದೆ.

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಅಪಘಾತಕ್ಕೆ ಕಾರಣವಾದ ವಾಹನ ಸ್ಥಳದಿಂದ ಪರಾರಿಯಾಗಿರುವ ಸಾಧ್ಯತೆ ಇದೆ.

ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶಗಳಿಂದ ಚಿರತೆಗಳು ಜನವಸತಿ ಪ್ರದೇಶಗಳತ್ತ ಸಂಚರಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಇದೀಗ ವಾಹನ ಡಿಕ್ಕಿಗೆ ಸಿಲುಕಿ ಕಪ್ಪು ಚಿರತೆ ಮೃತಪಟ್ಟಿರುವುದು ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ ಆತಂಕಕ್ಕೆ ಕಾರಣವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.