ಡೈಲಿವಾರ್ತೆ: 19/ನ./2026

ಸುಜ್ಞಾನ ಪಿಯು ಕಾಲೇಜ್ ಯಡಾಡಿ-ಮತ್ಯಾಡಿಯಲ್ಲಿ ವಾರ್ಷಿಕ ಕ್ರೀಡಾಕೂಟ:
ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ: ಸುಧಾರಾಣಿ ಟಿ.

ಕುಂದಾಪುರ: ಕ್ರೀಡೆ ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಕೇವಲ ದೈಹಿಕ ಸದೃಢತೆಯನ್ನು ನೀಡುವುದಷ್ಟೇ ಅಲ್ಲದೆ, ಮಾನಸಿಕ ಸ್ಥೈರ್ಯ, ಶಿಸ್ತು, ತಾಳ್ಮೆ, ಪರಿಶ್ರಮ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅಮಾಸೆಬೈಲು ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಧಾರಾಣಿ ಟಿ. ಹೇಳಿದರು.

ನ. 19ರ ಗುರುವಾರ ಬೆಳಿಗ್ಗೆ ಯಡಾಡಿ-ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಆಸಕ್ತಿ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಕ್ರೀಡೆಯಲ್ಲಿ ಭಾಗವಹಿಸುವಾಗ ಗೆಲುವು ಮತ್ತು ಸೋಲನ್ನು ಸಮಾನ ಮನೋಭಾವದಿಂದ ಸ್ವೀಕರಿಸುವುದನ್ನು ಕಲಿಯಬೇಕು. ಆತ್ಮವಿಶ್ವಾಸದಿಂದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು, ಫಲಿತಾಂಶವನ್ನು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸುವುದು ಹಾಗೂ ದೃಢಸಂಕಲ್ಪದಿಂದ ಗುರಿಯತ್ತ ಸಾಗುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರಬೇಕಾದ ಪ್ರಮುಖ ಗುಣಗಳಾಗಿವೆ. ಜೀವನದಲ್ಲಿ ಏರಿಳಿತಗಳು ಸಹಜವಾಗಿದ್ದು, ಸೋಲು ಎದುರಾದಾಗ ಕುಗ್ಗದೆ, ಗೆಲುವು ದೊರೆತಾಗ ಅಹಂಕಾರಪಡದೆ ಸಮಚಿತ್ತದಿಂದ ಮುನ್ನಡೆಯುವ ಮನೋಭಾವವನ್ನು ಕ್ರೀಡೆ ಕಲಿಸುತ್ತದೆ ಎಂದರು.

ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಯೋಗವೂ ಅತ್ಯಂತ ಮಹತ್ವದ್ದಾಗಿದೆ. ಯೋಗಾಭ್ಯಾಸದಿಂದ ಏಕಾಗ್ರತೆ, ತಾಳ್ಮೆ ಮತ್ತು ಆತ್ಮನಿಯಂತ್ರಣ ಬೆಳೆಸಿಕೊಳ್ಳಬಹುದು. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಹಾಗೂ ಓಂಕಾರಕ್ಕೆ ಸಮಯ ಮೀಸಲಿಡಬೇಕು. ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯದ ಸಮತೋಲನ ಉತ್ತಮ ಜೀವನಕ್ಕೆ ಆಧಾರವಾಗಿದೆ. ಕ್ರೀಡಾಂಗಣವು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ತರಬೇತಿ ನೆಲೆಯಾಗಿದ್ದು, ಆತ್ಮವಿಶ್ವಾಸ, ಧೈರ್ಯ ಮತ್ತು ಹೋರಾಟದ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು

ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ: ಡಾ. ರಮೇಶ್ ಶೆಟ್ಟಿ

ಕ್ರೀಡೆ ಎಂದರೆ ಕೇವಲ ಸೋಲು-ಗೆಲುವಿನ ಆಟವಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವುದು, ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಪ್ರಯತ್ನಿಸುವುದು ಹಾಗೂ ಕ್ರೀಡಾಸ್ಫೂರ್ತಿಯಿಂದ ಮುನ್ನಡೆಯುವುದು ಮುಖ್ಯ. ಗೆಲುವು ಕೆಲವರಿಗೆ ಮಾತ್ರ ಸೀಮಿತವಾದರೂ, ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಎಲ್ಲರಿಗೂ ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಹಿಂಜರಿಕೆಯಿಲ್ಲದೆ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸುಜ್ಞಾನ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಹೇಳಿದರು.

ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಅತಿಥಿಗಳಾಗಿ ಆಹ್ವಾನಿಸಲಾಗುತ್ತದೆ. ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರ ಹಾಗೂ ವಿವಿಧ ಇಲಾಖೆಗಳಲ್ಲಿನ ಸಾಧಕರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ಭವಿಷ್ಯದಲ್ಲಿ ವಿದ್ಯಾರ್ಥಿಗಳಲ್ಲಿ ಕೆಲವರಾದರೂ ಪೊಲೀಸ್ ಇಲಾಖೆಗೆ ಸೇರಿ ಉತ್ತಮ ಅಧಿಕಾರಿಗಳಾಗಿ ಸೇವೆ ಸಲ್ಲಿಸುವ ಕನಸು ಮೂಡಬೇಕು ಎಂಬ ಆಶಯದಿಂದ ಸುಧಾರಾಣಿ ಟಿ. ಅವರನ್ನು ಆಹ್ವಾನಿಸಲಾಗಿದೆ ಎಂದರು.

ಸುಧಾರಾಣಿ ಅವರ ದೈಹಿಕ ಕ್ಷಮತೆ, ಕ್ರೀಡಾಸಕ್ತಿ, ಶಿಸ್ತು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸುತ್ತಿರುವ ಸೇವೆ ಮೆಚ್ಚುವಂತದ್ದು. ವೈಯಕ್ತಿಕ ಸವಾಲುಗಳ ನಡುವೆಯೂ ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆ ಮಾಡಿರುವ ಅವರ ಬದುಕು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಯಾವುದೇ ಸಣ್ಣ ಕೊರತೆಯನ್ನು ದೌರ್ಬಲ್ಯವೆಂದು ಭಾವಿಸದೆ, ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂಬುದಕ್ಕೆ ಅವರ ಸಾಧನೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ಕ್ರೀಡೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಕೆಲವರು ಮಾತ್ರ ಪಡೆಯಲು ಸಾಧ್ಯ. ಆದರೆ ಭಾಗವಹಿಸುವ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯೂ ಅನುಭವ, ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಮನೋಭಾವ ಗಳಿಸಬಹುದು. ಆದ್ದರಿಂದ ಗೆಲುವೊಂದನ್ನೇ ಗುರಿಯಾಗಿಸಿಕೊಳ್ಳದೆ, ಎಲ್ಲರೂ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಸಂಸ್ಥೆಯು ಜಿಲ್ಲಾ ಹಾಗೂ ರಾಜ್ಯಮಟ್ಟದ ಕ್ರೀಡಾಸ್ಪರ್ಧೆಗಳಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸುತ್ತಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇಂದಿನ ಕ್ರೀಡಾಕೂಟದ ಅನುಭವ ಭವಿಷ್ಯದಲ್ಲಿ ಕ್ರೀಡಾ ಸಂಘಟಕರಾಗಿ, ದೈಹಿಕ ಶಿಕ್ಷಣ ಶಿಕ್ಷಕರಾಗಿ ಹಾಗೂ ಸ್ವಂತ ಸಂಸ್ಥೆಗಳನ್ನು ಸ್ಥಾಪಿಸಿ ಕ್ರೀಡಾ ಚಟುವಟಿಕೆಗಳನ್ನು ಮುನ್ನಡೆಸಲು ನೆರವಾಗಬಹುದು ಎಂದರು. ವಾರ್ಷಿಕ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸುಜ್ಞಾನ ವಿದ್ಯಾಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಉಪಸ್ಥಿತರಿದ್ದರು.

ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ಸ್ವಾಗತಿಸಿದರು.

ಪ್ರತಿಜ್ಞಾ ಸ್ವೀಕಾರವನ್ನು ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಬೋಧಿಸಿದರು.
ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕುಮಾರ್ ವಂದಿಸಿದರು.
ಶಿಕ್ಷಕ ಸತೀಶ್ ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.