ಡೈಲಿವಾರ್ತೆ: 19/ನ./2026

ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ – ಇಬ್ಬರ ಬಂಧನ

ಸುಳ್ಯ: ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದರೆಂಬ ಆರೋಪದ ಮೇರೆಗೆ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿರುವ ಘಟನೆ ಗುರುವಾರ ಬೆಳಗ್ಗಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

ಬಂಧಿತರನ್ನು ಸುಳ್ಯದ ಆಲೆಟ್ಟಿ ನಿವಾಸಿಗಳಾದ ಹಾಶಿರ್ ಎ. (28) ಮತ್ತು ಸಂಶುದ್ದೀನ್ ಎಸ್.ಎಂ. (25) ಎಂದು ಗುರುತಿಸಲಾಗಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಈ ವೇಳೆ ಸ್ಥಳದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಾಥಮಿಕ ವಿಚಾರಣೆ ವೇಳೆ ಜಾನುವಾರುಗಳನ್ನು ಕಳ್ಳತನ ಮಾಡಿ, ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.