ಡೈಲಿವಾರ್ತೆ: 20/ನ./2026

ಶಂಕರ್ ಕುಂದರ್‌ಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಕೋಟ ಬ್ಲಾಕ್ ಕಾಂಗ್ರೆಸ್ ಒತ್ತಾಯ!
ಹಿರಿಯ ನಾಯಕನ ಪಕ್ಷನಿಷ್ಠೆ, ಸುದೀರ್ಘ ಸೇವೆ ಪರಿಗಣಿಸಿ ಸೂಕ್ತ ಸ್ಥಾನಮಾನ ಕಲ್ಪಿಸಲು ಸರ್ವಾನುಮತದ ನಿರ್ಣಯ

ಕೋಟ: ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುವ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುದೀರ್ಘ ಅವಧಿ ಕಾರ್ಯನಿರ್ವಹಿಸಿರುವ ಶಂಕರ್ ಕುಂದರ್ ಅವರಿಗೆ ರಾಜ್ಯ ಸರಕಾರ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ.

ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ಶಂಕರ್ ಕುಂದರ್ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಅದರಲ್ಲೂ ದೀರ್ಘಕಾಲ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅನುಭವ, ಪಕ್ಷನಿಷ್ಠೆ ಹಾಗೂ ಸುದೀರ್ಘ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ಸೂಕ್ತ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು. ಇದರಿಂದ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಅವರ ಅನುಭವವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈಗಾಗಲೇ ಶಂಕರ್ ಕುಂದರ್ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಕೋಟ ಬ್ಲಾಕ್ ಕಾಂಗ್ರೆಸ್‌ನ ವಿವಿಧ ಪದಾಧಿಕಾರಿಗಳು ಮೊಳಹಳ್ಳಿ ದಿನೇಶ್ ಹೆಗ್ಡೆ ಅವರ ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ಹಿರಿಯ ನಾಯಕ ಜಯಪ್ರಕಾಶ್ ಹೆಗ್ಡೆ ಅವರೂ ತಮ್ಮ ಸಂಪರ್ಕಗಳ ಮೂಲಕ ಶಂಕರ್ ಕುಂದರ್ ಅವರಿಗೆ ಸೂಕ್ತ ಜವಾಬ್ದಾರಿ ನೀಡುವಂತೆ ರಾಜ್ಯ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿರುವ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಶಂಕರ್ ಕುಂದರ್ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸುವಂತೆ ಕೋಟ ಬ್ಲಾಕ್ ಕಾಂಗ್ರೆಸ್ ಕೈಗೊಂಡ ಸರ್ವಾನುಮತದ ನಿರ್ಣಯವನ್ನು ಕೆಪಿಸಿಸಿಗೆ ಕಳುಹಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ತಿಳಿಸಿದ್ದಾರೆ.