ಡೈಲಿವಾರ್ತೆ: 20/ನ./2026

ಕೌಟುಂಬಿಕ ಕಲಹ: ಪತಿ-ಪತ್ನಿ ನೇಣು ಬಿಗಿದು ಆತ್ಮಹತ್ಯೆ!

ಬಾಗಲಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ನಡೆದಿದೆ.

ಕುಳಲಿ ಗ್ರಾಮದ ನಿವಾಸಿಗಳಾದ ಅಪ್ಪಾಶಿ ಶಿವಪ್ಪ ನಡುವಿನಮನಿ (35) ಮತ್ತು ಅವರ ಪತ್ನಿ ರಾಜೇಶ್ವರಿ ನಡುವಿನಮನಿ (30) ಮೃತಪಟ್ಟವರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಕೌಟುಂಬಿಕ ವಿಚಾರವಾಗಿ ಉಂಟಾಗಿದ್ದ ಕಲಹ ಆತ್ಮಹತ್ಯೆಗೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಗುರುವಾರ ತಡರಾತ್ರಿ ಹಾಗೂ ಶುಕ್ರವಾರ ನಸುಕಿನ ಜಾವ 3ರಿಂದ 3.30ರ ಸುಮಾರಿಗೆ ಘಟನೆ ಸಂಭವಿಸಿದೆ. ಮೊದಲು ಅಪ್ಪಾಶಿ ಅವರು ಮನೆಯ ಹೊರಭಾಗದಲ್ಲಿರುವ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ ಪತ್ನಿ ರಾಜೇಶ್ವರಿ, ಮನೆಯ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾಹಿತಿ ನೀಡಿದ್ದು, ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಲಿ ಗ್ರಾಮದ ತೋಟದ ಮನೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಸುಕಿನ ಜಾವ 3ರಿಂದ 3.30ರ ನಡುವೆ ಮೊದಲು ಪತಿ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡಿದ್ದು, ಇದನ್ನು ಕಂಡ ಪತ್ನಿಯೂ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.