ಡೈಲಿವಾರ್ತೆ: 20/ನ./2026

ಎದೆನೋವಿನ ನಡುವೆಯೂ 26 ಮಕ್ಕಳ ಜೀವ ಉಳಿಸಿದ ಶಾಲಾ ಬಸ್ ಚಾಲಕ: ಮರಕ್ಕೆ ಬಸ್ ಡಿಕ್ಕಿ ಹೊಡೆಸಿ ಕೊನೆಯುಸಿರೆಳೆದ ಲಕ್ಷ್ಮಣ್!

ಚಿಕ್ಕಮಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲನೆ ಮಾಡುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲೂ ಸಮಯಪ್ರಜ್ಞೆ ಮೆರೆದ ಚಾಲಕ 26 ವಿದ್ಯಾರ್ಥಿಗಳ ಜೀವ ಉಳಿಸಿ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೊಪ್ಪ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169ರ ಅಮ್ಮಡಿ ಗ್ರಾಮದ ಬಳಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಬಸವಾನಿ ನಿವಾಸಿ ಲಕ್ಷ್ಮಣ್ (65) ಮೃತಪಟ್ಟ ಬಸ್ ಚಾಲಕ.
26 ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಲಕ್ಷ್ಮಣ್ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡಿದೆ. ನೋವಿನ ತೀವ್ರತೆಯ ನಡುವೆಯೂ ಬಸ್‌ನಲ್ಲಿ ಮಕ್ಕಳಿರುವುದನ್ನು ಅರಿತ ಅವರು, ವಾಹನದ ಮೇಲಿನ ನಿಯಂತ್ರಣ ಕಳೆದುಕೊಳ್ಳದಂತೆ ಕೊನೆಯ ಕ್ಷಣದವರೆಗೂ ಪ್ರಯತ್ನಿಸಿದ್ದಾರೆ. ಆದರೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬಸ್ ನಿಯಂತ್ರಿಸುವುದು ಅಸಾಧ್ಯವಾಗಿದೆ. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಮರವೊಂದಕ್ಕೆ ಬಸ್ ಡಿಕ್ಕಿ ಹೊಡೆಸಿ ನಿಲ್ಲಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ಬಸ್ ನಿಂತ ತಕ್ಷಣವೇ ಚಾಲಕ ಲಕ್ಷ್ಮಣ್ ಅವರು ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ತಮ್ಮ ಪ್ರಾಣ ಸಂಕಟದ ನಡುವೆಯೂ ಬಸ್ಸಿನಲ್ಲಿದ್ದ 26 ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಿ ಅವರು ತೋರಿದ ಸಮಯಪ್ರಜ್ಞೆ ದುರಂತದ ನಡುವೆಯೂ ಮೆಚ್ಚುಗೆಗೆ ಪಾತ್ರವಾಗಿದೆ.

ಕೆಲವು ವಿದ್ಯಾರ್ಥಿಗಳಿಗೆ ಗಾಯ:
ಬಸ್ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆಯೂ ವೈದ್ಯರು ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಟಿ.ಡಿ. ರಾಜೇಗೌಡ ಅವರು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಮೃತ ಚಾಲಕ ಲಕ್ಷ್ಮಣ್ ಅವರ ಪಾರ್ಥಿವ ಶರೀರವನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ.
ಕುಟುಂಬದ ಆಧಾರಸ್ತಂಭವಾಗಿದ್ದ ಲಕ್ಷ್ಮಣ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸಂಬಂಧಿಕರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.