


ಡೈಲಿವಾರ್ತೆ: 21/ನ./2026




ಕಟಪಾಡಿ: ಶಟಲ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ: ಶಟಲ್ ಆಟವಾಡುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ಕೋಟೆಬೀಡು ಸಮೀಪ ಸಂಭವಿಸಿದೆ.
ಮೃತರನ್ನು ಕೋಟೆಬೀಡು ನಿವಾಸಿ ಪ್ರಶಾಂತ್ ಭೋಜ ಕುಂದರ್ (39) ಎಂದು ಗುರುತಿಸಲಾಗಿದೆ. ಇವರು ಸಂಜೆ ಸುಮಾರು 5 ಗಂಟೆಯ ವೇಳೆಗೆ ಶಟಲ್ ಆಟದಲ್ಲಿ ತೊಡಗಿದ್ದಾಗ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸ್ನೇಹಿತರು ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಉಡುಪಿಯ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಶಾಂತ್ ಅವರು ಎರಡು ತಿಂಗಳ ಹಿಂದೆ ಉದ್ಯೋಗದ ಹುಡುಕಾಟದಲ್ಲಿ ದುಬೈಗೆ ತೆರಳಿದ್ದರು. ಬಳಿಕ 10 ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

