



ಡೈಲಿವಾರ್ತೆ: 21/ನ./2026




ಪ್ರಜಾ ಸೇವಾ ಆಂದೋಲನಕ್ಕೆ ಎರಡು ತಿಂಗಳು ಕಳೆದರೂ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಸಮಾಧಾನ

ಕುಂದಾಪುರ: ಪ್ರಜಾ ಸೇವಾ ಆಂದೋಲನ ಆರಂಭಗೊಂಡು ಎರಡು ತಿಂಗಳು ಕಳೆದಿದ್ದರೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಪರಿಹಾರ ದೊರೆತಿಲ್ಲ ಎಂದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವೆಂಬರ್ 21ರಂದು ಶಿರಿಯಾರ ಗ್ರಾಮ ಪಂಚಾಯತ್ನಲ್ಲಿ ನಡೆದ ಪ್ರಜಾ ಸೇವಾ ಆಂದೋಲನದ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಪ್ರಜಾ ಸೇವಾ ಕಾರ್ಯಕ್ರಮವು ಕೇವಲ ಘೋಷಣೆ ಹಾಗೂ ಸಭೆಗಳಿಗೆ ಸೀಮಿತವಾಗದೆ, ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಡಿತರ, ಪಿಂಚಣಿ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ ತ್ವರಿತವಾಗಿ ಪರಿಹರಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಅವರು ಹೇಳಿದರು.


ಕಾರ್ಯಕ್ರಮ ಆರಂಭವಾಗಿ ಎರಡು ತಿಂಗಳು ಕಳೆದಿದ್ದರೂ ಯಾವುದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಲು ಸಾಧ್ಯವಾಗದಿದ್ದರೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವೀಕರಿಸಲಾದ ಅಹವಾಲುಗಳು, ಪರಿಹರಿಸಲಾದ ಸಮಸ್ಯೆಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತು ಅಧಿಕಾರಿಗಳು ಸ್ಪಷ್ಟವಾದ ವರದಿ ಸಲ್ಲಿಸಬೇಕು ಎಂದು ಶಾಸಕರು ಸೂಚಿಸಿದರು.
ಸಾರ್ವಜನಿಕರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ, ವಿಳಂಬವಿಲ್ಲದೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಅಶೋಕ್ ಭಟ್, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ, ಶಿರಿಯಾರ ಗ್ರಾಮ ಪಂಚಾಯತ್ ಪಿಡಿಒ ಜಯರಾಮ ಶೆಟ್ಟಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಸುನಿತಾ ಶೆಟ್ಟಿ, ಆಡಳಿತಾಧಿಕಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

