


ಡೈಲಿವಾರ್ತೆ: 23/ನ./2026




ಡಿ.6ರಂದು ಕುಂದಾಪುರದಲ್ಲಿ ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ:
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಪಿಯುಸಿ ಶಿಕ್ಷಣಕ್ಕೆ ಶೇ.100ರಷ್ಟು ವಿದ್ಯಾರ್ಥಿವೇತನ ಪಡೆಯಲು ಅವಕಾಶ

ಕುಂದಾಪುರ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡಚಣೆಯಿಲ್ಲದೆ ಗುಣಮಟ್ಟದ ಪಿಯುಸಿ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ಡಿಸೆಂಬರ್ 6ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪಿಯುಸಿ ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಸುಜ್ಞಾನ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದರು.

ನ.22ರಂದು ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು
ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಈ ಪರೀಕ್ಷೆ ಆಯೋಜಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ವಿದ್ಯಾರ್ಥಿಗಳಿಗೂ ಭಾಗವಹಿಸಲು ಮುಕ್ತ ಅವಕಾಶವಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂದರು.
ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸುಜ್ಞಾನ ಸಂಸ್ಥೆ:

ಕಳೆದ ಐದು ವರ್ಷಗಳಿಂದ ಕುಂದಾಪುರದಲ್ಲಿ ಗುಣಮಟ್ಟದ ಪಿಯುಸಿ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ತನ್ನದೇ ಆದ ಛಾಪು ಮೂಡಿಸಿದೆ. ಸಿಇಟಿ, ನೀಟ್, ಜೆಇಇ ಪರೀಕ್ಷೆಗಳ ಜೊತೆಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿಎಸ್ ತರಬೇತಿಯನ್ನೂ ನೀಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಐಐಟಿ, ವೈದ್ಯಕೀಯ ಕಾಲೇಜುಗಳು ಹಾಗೂ ಕರ್ನಾಟಕದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಸಿದ್ಧಗೊಳಿಸುವುದರೊಂದಿಗೆ ವೃತ್ತಿಪರ ಶಿಕ್ಷಣದತ್ತ ಮಾರ್ಗದರ್ಶನ ನೀಡಲಾಗುತ್ತಿದೆ.
ಕಳೆದ ಸಾಲಿನಲ್ಲಿ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿದ್ದರೂ ಸಂಸ್ಥೆಯ ಹಲವು ವಿದ್ಯಾರ್ಥಿಗಳು ಎಂಬಿಬಿಎಸ್ ಪ್ರವೇಶ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. 2025-26ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ನೀಟ್ ಪರೀಕ್ಷೆಯಲ್ಲಿ ಸಮೀದ್ ಪ್ಯಾರೀಸ್ ಅಖಿಲ ಭಾರತ ಮಟ್ಟದಲ್ಲಿ 2135ನೇ ರ್ಯಾಂಕ್ (ವರ್ಗವಾರು) ಗಳಿಸಿ ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಕೂಡ ಸಂಸ್ಥೆಯ ವಿದ್ಯಾರ್ಥಿವೇತನದ ಮೂಲಕ ಶಿಕ್ಷಣ ಪಡೆದ ವಿದ್ಯಾರ್ಥಿಯಾಗಿದ್ದಾರೆ. ಧನುಷ್ ದೇವಾಡಿಗ, ಜೈರಾಜ್, ರುಮೇಜ್ ಶೇಖ್, ಇಂಚರಾ, ಅಲಿಜಾ ಕರಾಮತುಲ್ಲಾ, ಅರ್ಜುನ್ ಜಿ. ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ ಎಂದು ತಿಳಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೂ ಸಮಗ್ರ ಸಿದ್ಧತೆ ನೀಡಲಾಗುತ್ತಿದೆ. ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಅನುಭವಿ ಬೋಧಕ ವೃಂದ ವಿದ್ಯಾರ್ಥಿಗಳಿಗೆ ನಿರಂತರವಾಗಿ ಗುಣಮಟ್ಟದ ಶಿಕ್ಷಣ ಮತ್ತು ಮಾರ್ಗದರ್ಶನ ನೀಡುತ್ತಿದೆ ಎಂದರು.
ಪ್ರತಿಭಾವಂತರಿಗೆ ಶೇ.100ರಷ್ಟು ವಿದ್ಯಾರ್ಥಿವೇತನ – ಭರತ್ ಶೆಟ್ಟಿ

ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡಚಣೆ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಆಶಯದೊಂದಿಗೆ ಈ ಬಾರಿ ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಮಾತ್ರವಲ್ಲದೆ, ಪ್ರತಿಭೆ ಮತ್ತು ಆಸಕ್ತಿ ಹೊಂದಿರುವ ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಲಾಗುತ್ತದೆ. ಇದರಿಂದ ರಾಜ್ಯ, ಸಿಬಿಎಸ್ಇ ಹಾಗೂ ಐಸಿಎಸ್ಇ ವಿದ್ಯಾರ್ಥಿಗಳಿಗೆ ತಮ್ಮ ಪಠ್ಯಕ್ರಮದ ಮಾದರಿಯಲ್ಲೇ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ ಎಂದರು.
ಪರೀಕ್ಷೆಯಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಹಾಗೂ ಇಂಗ್ಲಿಷ್ ಸೇರಿದಂತೆ ನಾಲ್ಕು ವಿಷಯಗಳಿರಲಿದ್ದು, ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ವಸ್ತುನಿಷ್ಠ ಮತ್ತು ವಿವರಣಾತ್ಮಕ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪಿಯುಸಿ ಶಿಕ್ಷಣ ಸಂಪೂರ್ಣ ಉಚಿತವಾಗಿರುತ್ತದೆ. ಇತರ ವಿದ್ಯಾರ್ಥಿಗಳಿಗೆ ಅವರು ಗಳಿಸುವ ಅಂಕಗಳ ಆಧಾರದಲ್ಲಿ ಶೇ.80, ಶೇ.75 ಸೇರಿದಂತೆ ವಿವಿಧ ಪ್ರಮಾಣದ ವಿದ್ಯಾರ್ಥಿವೇತನ ಹಾಗೂ ಶುಲ್ಕ ರಿಯಾಯಿತಿ ನೀಡಲಾಗುತ್ತದೆ.
ಕಳೆದ ವರ್ಷ ಸಂಸ್ಥೆಯು ಐದು ಕೋಟಿಗೂ ಅಧಿಕ ಮೊತ್ತವನ್ನು ವಿದ್ಯಾರ್ಥಿವೇತನ ಹಾಗೂ ಶುಲ್ಕ ರಿಯಾಯಿತಿ ರೂಪದಲ್ಲಿ ವಿತರಿಸಿದೆ. ಈ ವರ್ಷ ಅದಕ್ಕಿಂತ ಹೆಚ್ಚಿನ ಮೊತ್ತದ ನೆರವು ನೀಡುವ ನಿರೀಕ್ಷೆಯಿದೆ. ಆದ್ದರಿಂದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಎಸ್ಎಸ್ಎಲ್ಸಿ ಅಂಕಗಳ ಆಧಾರದಲ್ಲೂ ಉಚಿತ ಶಿಕ್ಷಣ:
ವಿದ್ಯಾರ್ಥಿವೇತನ ಪರೀಕ್ಷೆಯ ಹೊರತಾಗಿಯೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ವಿಶೇಷ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು 625ರಲ್ಲಿ 615 ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದರೆ ಸಂಪೂರ್ಣ ಉಚಿತ ಪಿಯುಸಿ ಶಿಕ್ಷಣ ಪಡೆಯಬಹುದು. ಸಿಬಿಎಸ್ಇ ಮತ್ತು ಐಸಿಎಸ್ಇ ವಿದ್ಯಾರ್ಥಿಗಳು ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ಶೇ.95 ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದರೆ ಉಚಿತ ಶಿಕ್ಷಣದ ಅವಕಾಶವಿದೆ.
ಈ ವಿಶೇಷ ಸೌಲಭ್ಯವನ್ನು ಮೊದಲಿಗೆ ನೋಂದಣಿ ಮಾಡಿಸಿಕೊಳ್ಳುವ 50 ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ. ಹೀಗಾಗಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ವಿಶ್ವಾಸ ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲಿಗೆ ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಭರತ್ ಶೆಟ್ಟಿ ವಿವರಿಸಿದರು.
15 ಎಕರೆ ವಿಶಾಲ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ಸೌಲಭ್ಯ:
ಸುಮಾರು 15 ಎಕರೆ ವಿಶಾಲವಾದ ಕ್ಯಾಂಪಸ್ ಹೊಂದಿರುವ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸುಸಜ್ಜಿತ ವಸತಿ ನಿಲಯಗಳ ವ್ಯವಸ್ಥೆಯಿದೆ. ವಸತಿ ನಿಲಯಗಳಲ್ಲಿ ದಿನದ 24 ಗಂಟೆಯೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ವಸತಿ ಶಿಕ್ಷಕರಿದ್ದು, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ವಾಸ್ತವ್ಯ ಹೂಡಿ ಅವರ ಸಂದೇಹಗಳನ್ನು ಪರಿಹರಿಸುತ್ತಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಹಾರ ವ್ಯವಸ್ಥೆ, ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಪ್ರಯೋಗಾಲಯ ಹಾಗೂ ಪ್ರಶಾಂತವಾದ ಕಲಿಕಾ ವಾತಾವರಣವನ್ನು ಕಲ್ಪಿಸಲಾಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಸಂಸ್ಥೆ ಸಮರ್ಪಕ ಮಾರ್ಗದರ್ಶನ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರ ಅನುಭವ ಹಾಗೂ ಸಮರ್ಪಿತ ಬೋಧಕ ವೃಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿದೆ ಎಂದರು.
ನೋಂದಣಿ ಮತ್ತು ಪರೀಕ್ಷಾ ವಿವರಗಳು:
ವಿದ್ಯಾರ್ಥಿವೇತನ ಪರೀಕ್ಷೆಗೆ ಭಾಗವಹಿಸಲು ಮುಂಚಿತ ನೋಂದಣಿ ಕಡ್ಡಾಯವಾಗಿದೆ. ಆಸಕ್ತ ವಿದ್ಯಾರ್ಥಿಗಳು 6366976744, 9964291755 ಅಥವಾ 8217527362 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ನೋಂದಾಯಿತ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡಲಾಗುತ್ತದೆ. ಡಿಸೆಂಬರ್ 6ರಂದು ಬೆಳಿಗ್ಗೆ 9 ಗಂಟೆಗೆ ವಿದ್ಯಾರಣ್ಯ ಕ್ಯಾಂಪಸ್ಗೆ ಆಗಮಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬೆಳಿಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗಿ 11 ಗಂಟೆಗೆ ಮುಕ್ತಾಯಗೊಳ್ಳಲಿದೆ.
ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಿ ವಿದ್ಯಾರ್ಥಿವೇತನದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಭರತ್ ಶೆಟ್ಟಿ ಮನವಿ ಮಾಡಿದರು.

