ಡೈಲಿವಾರ್ತೆ: 23/ನ./2026

ವಕ್ವಾಡಿಯಲ್ಲಿ ‘ಆರೋಗ್ಯ ಸ್ಪಂದನ 2026’ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟನೆ: ಗ್ರಾಮೀಣ ಭಾಗದ ಜನರಿಗೆ ಉಚಿತ ನೇತ್ರ ತಪಾಸಣಾ ಶಿಬಿರಗಳು ಪ್ರಯೋಜನಕಾರಿ: ಶಾಸಕ ಕಿರಣ್ ಕೊಡ್ಗಿ

ಕೋಟೇಶ್ವರ, ನ.23: ಗ್ರಾಮೀಣ ಪ್ರದೇಶದ ಜನರಲ್ಲಿ ನೇತ್ರ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ, ಕಣ್ಣಿನ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಉಚಿತ ನೇತ್ರ ತಪಾಸಣಾ ಶಿಬಿರಗಳು ಸಹಕಾರಿಯಾಗಿವೆ ಎಂದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ವಕ್ವಾಡಿ ಫ್ರೆಂಡ್ಸ್ ವಕ್ವಾಡಿ ಸಂಘಟನೆಯ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಒನ್‌ಸೈಟ್ ಎಸ್ಸಿಲಾರ್ ಲಕ್ಸೂಟಿಕಾ ಫೌಂಡೇಶನ್ ಬೆಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ವಕ್ವಾಡಿಯಲ್ಲಿ ರವಿವಾರ ಆಯೋಜಿಸಿದ್ದ ‘ಆರೋಗ್ಯ ಸ್ಪಂದನ 2026’ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಣ್ಣಿನ ಆರೋಗ್ಯದ ನಿರ್ಲಕ್ಷ್ಯದಿಂದ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳು ಎದುರಾಗುವ ಸಾಧ್ಯತೆಯಿದೆ.

ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅನೇಕ ತೊಂದರೆಗಳನ್ನು ಆರಂಭದಲ್ಲಿಯೇ ಗುರುತಿಸಿ ತಡೆಗಟ್ಟಬಹುದು. ಗ್ರಾಮೀಣ ಜನರಿಗೆ ತಜ್ಞ ವೈದ್ಯರ ಸೇವೆಯನ್ನು ಉಚಿತವಾಗಿ ಒದಗಿಸುವ ಉದ್ದೇಶದಿಂದ ಇಂತಹ ಶಿಬಿರವನ್ನು ಆಯೋಜಿಸಿರುವ ವಕ್ವಾಡಿ ಫ್ರೆಂಡ್ಸ್ ಹಾಗೂ ಸಹಯೋಗಿ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ಪ್ರಮುಖರಾದ ಕೀರ್ತಿ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮದ ಪ್ರತಿಯೊಬ್ಬರಿಗೂ ಗುಣಮಟ್ಟದ ನೇತ್ರ ತಪಾಸಣಾ ಸೇವೆಯನ್ನು ಉಚಿತವಾಗಿ ತಲುಪಿಸುವ ಆಶಯದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕ್ವಾಡಿ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್ ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು, ಧರ್ಮಪ್ರಸಾದ್ ರೈ ಎ., ಕ್ಯಾನ್ಸರ್ ತಜ್ಞ ಡಾ. ಸಂತೋಷ್ ಕುಲಾಲ್, ಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ಎನ್., ಮಹಿಳಾ ಮಂಡಳಿ ಅಧ್ಯಕ್ಷೆ ನಾಗರತ್ನ ಹಾಗೂ ಕೊರ್ಗಿ ಸಮುದಾಯ ಆರೋಗ್ಯ ಅಧಿಕಾರಿ ಮೇದನಿ ಸಿ. ಉಪಸ್ಥಿತರಿದ್ದರು.
ಶಿಬಿರದಲ್ಲಿ ನುರಿತ ತಜ್ಞ ವೈದ್ಯರು ಸಾರ್ವಜನಿಕರಿಗೆ ನೇತ್ರ ತಪಾಸಣೆ ನಡೆಸಿದರು. ಗ್ರಾಮದ ಹಾಗೂ ಸುತ್ತಮುತ್ತಲಿನ ಹಲವು ನಾಗರಿಕರು ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಂಡರು.
ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು. ದೇವಿಪ್ರಸಾದ್ ಶೆಟ್ಟಿ ವಂದಿಸಿದರು.