


ಡೈಲಿವಾರ್ತೆ: 24/ನ./2026




ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಬಿಜೆಪಿ ಸರ್ಕಾರವೇ ಹೊಣೆ: ಸಚಿವ ರಿಜ್ವಾನ್ ಅರ್ಷದ್ – ನಿರ್ಮಾಣಕ್ಕೆ ಟೆಂಡರ್ ನೀಡಿ, ಕಂಚಿನ ಪ್ರತಿಮೆ ಘೋಷಿಸಿದ್ದು ಬಿಜೆಪಿಯೇ; ಕಾಂಗ್ರೆಸ್ ವಿರುದ್ಧ ಆರೋಪಿಸುವ ನೈತಿಕತೆ ಇಲ್ಲ

ಉಡುಪಿ: ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ನೀಡಿದ್ದು ಹಾಗೂ ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದು ಹಿಂದಿನ ಬಿಜೆಪಿ ಸರ್ಕಾರ. ಯೋಜನೆಯ ಅನುಷ್ಠಾನದ ವೇಳೆ ಉಂಟಾದ ಸಮಸ್ಯೆಗಳಿಗೆ ಅಂದಿನ ಆಡಳಿತವೇ ಹೊಣೆಯಾಗಿದ್ದು, ಇದೀಗ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವುದು ಸಮಂಜಸವಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಮಂಗಳವಾರ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಕಾಂಗ್ರೆಸ್ ಕೂಡ ಬೆಂಬಲ ನೀಡಿತ್ತು. ಆದರೆ, ಪಾರ್ಕ್ ನಿರ್ಮಾಣದ ಬಳಿಕ ನಡೆದ ಬೆಳವಣಿಗೆಗಳು ಹಾಗೂ ಯೋಜನೆಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳ ಬಗ್ಗೆ ಜಿಲ್ಲೆಯ ಜನರಿಗೆ ಸಂಪೂರ್ಣ ಅರಿವಿದೆ. ಹೀಗಿರುವಾಗ ಹಿಂದಿನ ವಿಚಾರಗಳನ್ನು ಮರೆತು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಜಿಲ್ಲೆಯ ಜನರು ಪ್ರಜ್ಞಾವಂತರಾಗಿದ್ದು, ಸತ್ಯಾಸತ್ಯತೆಗಳನ್ನು ಅರಿತಿದ್ದಾರೆ ಎಂದರು.
ಥೀಮ್ ಪಾರ್ಕ್ ನಿರ್ಮಾಣದ ಹೊಣೆ ಹೊತ್ತಿದ್ದ ಬಿಜೆಪಿ ಆಡಳಿತದ ಅವಧಿಯಲ್ಲೇ ಸಮಸ್ಯೆಗಳು ಉದ್ಭವಿಸಿವೆ. ಇದೀಗ ಅದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿ ಕಾಂಗ್ರೆಸ್ ವಿರುದ್ಧ ಆರೋಪಿಸುವ ಮೂಲಕ ಬಿಜೆಪಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸಮಸ್ಯೆಗೆ ಬಿಜೆಪಿ ಸರ್ಕಾರವೇ ಕಾರಣವಾಗಿದ್ದು, ಇದರಲ್ಲಿ ಕಾಂಗ್ರೆಸ್ನ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಶುರಾಮ ಥೀಮ್ ಪಾರ್ಕ್ ವಿಚಾರ ನ್ಯಾಯಾಲಯದ ವ್ಯಾಪ್ತಿಯಲ್ಲಿದ್ದ ಕಾರಣ ಈವರೆಗೆ ಸರ್ಕಾರದ ವತಿಯಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ನ್ಯಾಯಾಲಯದ ಆದೇಶ ಹೊರಬಂದಿರುವುದರಿಂದ ಮುಂದಿನ ಕ್ರಮಗಳಿಗೆ ಅವಕಾಶ ಲಭಿಸಿದೆ. ಸೂಕ್ತ ಸಮಯದಲ್ಲಿ ಥೀಮ್ ಪಾರ್ಕ್ ಅನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ, ಅಗತ್ಯವಿರುವ ಸರಿಪಡಿಸುವ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ನ್ಯಾಯಾಲಯದ ಆದೇಶ ಮತ್ತು ಲಭ್ಯವಿರುವ ಅವಕಾಶಗಳ ಆಧಾರದಲ್ಲಿ ಮುಂದಿನ ಕ್ರಮಗಳನ್ನು ನಿರ್ಧರಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.

