


ಡೈಲಿವಾರ್ತೆ: 26/ನ./2026




ಕೊಡಿ ಹಬ್ಬದ ಜನಸಂದಣಿಯಲ್ಲಿ ಕರಿಮಣಿ ಸರ ಕಳವು ಪ್ರಕರಣ: 24 ಗಂಟೆಯೊಳಗೆ ಐವರು ಆರೋಪಿಗಳ ಬಂಧನ

ಕುಂದಾಪುರ: ಕೋಟೇಶ್ವರದ ಕೊಡಿ ಹಬ್ಬದ ಅನ್ನಪ್ರಸಾದ ವಿತರಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರ 7 ಪವನ್ ತೂಕದ ಚಿನ್ನದ ಕರಿಮಣಿ ಸರ ಕಳವುಗೈದ ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿರುವ ಕುಂದಾಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹6 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಕಾರು ಹಾಗೂ 7 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನ.24ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದ ಸಂದರ್ಭದಲ್ಲಿ ಈ ಕಳವು ಕೃತ್ಯ ನಡೆದಿತ್ತು. ಕುಂದಾಪುರ ತಾಲೂಕಿನ ಜಪ್ತಿ ಸಮೀಪದ ನಿವಾಸಿ ಗೀತಾ ಅವರು ತಮ್ಮ ಪತಿಯೊಂದಿಗೆ ಔಷಧ ಖರೀದಿಸುವ ಉದ್ದೇಶದಿಂದ ಕುಂದಾಪುರಕ್ಕೆ ತೆರಳುತ್ತಿದ್ದರು. ಕೊಡಿ ಹಬ್ಬದ ಹಿನ್ನೆಲೆಯಲ್ಲಿ ಕೋಟೇಶ್ವರ ಬೈಪಾಸ್ನಲ್ಲಿ ಬಸ್ನಿಂದ ಇಳಿದು ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಬಳಿಕ ಅನ್ನಪ್ರಸಾದ ಸ್ವೀಕರಿಸಲು ಸರತಿಯಲ್ಲಿ ನಿಂತಿದ್ದ ವೇಳೆ ಜನಸಂದಣಿಯನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಳವುಗೈದಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಕುಂದಾಪುರ ಪೊಲೀಸರು ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಶೈಲಜ ಬಡಾವಣೆ ನಿವಾಸಿ ಭಾಗ್ಯ (39), ಆಕೆಯ ಪತಿ ಎಸ್. ನಾಗರಾಜ (48), ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆನ್ನಾಗಂ ನಿವಾಸಿಗಳಾದ ಅಶ್ವಿನಿ ಎಲ್. ಅಲಿಯಾಸ್ ಗಾಯತ್ರಿ (25), ಕಾಮಾಚಿ (50) ಹಾಗೂ ಕೃಷ್ಣಗಿರಿ ಜಿಲ್ಲೆಯ ಆದಮ್ಮಾಳ್ ಅಲಿಯಾಸ್ ಆದ್ಯಾಮ್ಮ (49) ಎಂದು ಗುರುತಿಸಲಾಗಿದೆ.
ಆರೋಪಿಗಳು ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ. ಬಂಧಿತರಿಂದ ಕಳವುಗೈದ ಸುಮಾರು 7 ಪವನ್ ತೂಕದ, ₹6 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಕಾರು ಹಾಗೂ 7 ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಸಿಸಿ ಕ್ಯಾಮೆರಾ ದೃಶ್ಯಾವಳಿಗಳಿಂದ ಮಹತ್ವದ ಸುಳಿವು:
ಕೊಡಿ ಹಬ್ಬದ ಹಿನ್ನೆಲೆಯಲ್ಲಿ ಕೋಟಿಲಿಂಗೇಶ್ವರ ದೇವಸ್ಥಾನದ ಒಳಭಾಗ, ಹೊರಭಾಗ, ರಥಬೀದಿ ಸೇರಿದಂತೆ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ವತಿಯಿಂದ 28 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಮಹಿಳೆಯ ಕರಿಮಣಿ ಸರ ಕಳವುಗೈದ ದೃಶ್ಯಗಳು ಹಾಗೂ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದವು.
ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯು ಪೊಲೀಸರಿಗೆ ಒದಗಿಸಿದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಮತ್ತು ತಾಂತ್ರಿಕ ದಾಖಲೆಗಳು ಆರೋಪಿಗಳ ಚಹರೆ ಪತ್ತೆಹಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ತಾಂತ್ರಿಕವಾಗಿ ಪರಿಶೀಲಿಸಿ ಆರೋಪಿಗಳ ಚಲನವಲನದ ಜಾಡು ಹಿಡಿದ ಪೊಲೀಸರು, ಕೃತ್ಯ ನಡೆದ 24 ಗಂಟೆಯೊಳಗೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ್ ಡಿ. ಗೌಡ ನೇತೃತ್ವದಲ್ಲಿ ಪಿಎಸ್ಐಗಳಾದ ನಂಜಾನಾಯ್ಕ್ ಎನ್. ಹಾಗೂ ಪುಷ್ಪ ಮತ್ತು ಸಿಬ್ಬಂದಿಗಳಾದ ಮೋಹನ, ಸಂತೋಷಕುಮಾರ್, ಮಹಾಬಲ ಶೆಟ್ಟಿಗಾರ್, ಚಂದ್ರಶೇಖರ ಅರೆಶಿರೂರು, ಘನಶ್ಯಾಮ್, ಸಂತೋಷ ದೇವಾಡಿಗ, ಗೌತಮ, ಲೋಹಿತ್, ನಾರಾಯಣ, ಪದ್ಮಾವತಿ, ರೇವತಿ, ಭಾಗೀರಥಿ, ಚಾಲಕ ಎ.ಆರ್.ಎಸ್.ಐ. ರಾಜು ಭೋವಿ, ಖಾಸಿಮ್ ಜಮಾದಾರ್ ಹಾಗೂ ಆರ್ಡಿಸಿ ವಿಭಾಗದ ದಿನೇಶ್ ಮತ್ತು ನಿತೀನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

