ಡೈಲಿವಾರ್ತೆ: 28/ನ./2026

ಬ್ರಹ್ಮಾವರ ಮಿನಿವಿಧಾನ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ:
ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ಮಾನವೀಯತೆ ಬೆಳೆಸಿಕೊಳ್ಳಿ: ತಹಶೀಲ್ದಾರ್ ಅಶೋಕ್ ಭಟ್

ಬ್ರಹ್ಮಾವರ: ಜಾತಿ, ಧರ್ಮ ಹಾಗೂ ಮೇಲು-ಕೀಳು ಎಂಬ ಭೇದಭಾವಗಳನ್ನು ಮೀರಿ ಪ್ರತಿಯೊಬ್ಬ ಮನುಷ್ಯನಲ್ಲೂ ದೇವರನ್ನು ಕಾಣುವ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು. ಕನಕದಾಸರ ಭಕ್ತಿ, ಸಮಾನತೆ ಮತ್ತು ಮಾನವೀಯತೆಯ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ ಎಂದು ಬ್ರಹ್ಮಾವರ ತಹಶೀಲ್ದಾರ್ ಅಶೋಕ್ ಭಟ್ ಹೇಳಿದರು.

ನ. 27ರಂದು ಬ್ರಹ್ಮಾವರ ಮಿನಿವಿಧಾನಸೌಧದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಜಾತಿ ವ್ಯವಸ್ಥೆ, ಅಸಮಾನತೆ ಮತ್ತು ತಾರತಮ್ಯದ ವಿರುದ್ಧ ಧ್ವನಿ ಎತ್ತಿ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ. ಅವರ ಆದರ್ಶಗಳು ಕೇವಲ ಜಯಂತಿ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನಲ್ಲೂ ಅಳವಡಿಕೆಯಾಗಬೇಕು ಎಂದರು.

ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಬೇಕು. ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಕೆಲಸಗಳನ್ನು ಆದ್ಯತೆಯ ಮೇರೆಗೆ ನಿರ್ವಹಿಸಿ, ಗೌರವಯುತವಾಗಿ ನಡೆದುಕೊಳ್ಳಬೇಕು. ಶಾಲೆಗಳು ಜಾತಿ, ಧರ್ಮದ ಭೇದವಿಲ್ಲದೆ ಮಕ್ಕಳು ಒಟ್ಟಾಗಿ ಕಲಿಯುವ ಮೂಲಕ ಸಮಾನತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಬೆಳೆಸುವ ಪ್ರಮುಖ ಕೇಂದ್ರಗಳಾಗಿವೆ ಎಂದು ತಿಳಿಸಿದರು.

ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಸ್ಪರ ಗೌರವ, ಸಮಾನತೆ ಮತ್ತು ಮಾನವೀಯತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಉಪತಹಶೀಲ್ದಾರ್ ಹರ್ಷ, ಕಂದಾಯ ನಿರೀಕ್ಷಕ ರಾಜು ಹಾಗೂ ಮಿನಿವಿಧಾನಸೌಧದ ಸಿಬ್ಬಂದಿ ಉಪಸ್ಥಿತರಿದ್ದರು.