ಡೈಲಿವಾರ್ತೆ: 28/ನ./2026

ಸಾಸ್ತಾನ ಗುಂಡ್ಮಿಯಲ್ಲಿ ಭೀಕರ ಅಪಘಾತ: ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಯಾಗಿ ಬೆಂಕಿಗಾಹುತಿಯಾದ ಕಾರು!

ಕೋಟ: ಗೋಕರ್ಣದಿಂದ ಉಡುಪಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ, ರಸ್ತೆ ವಿಭಾಜಕವನ್ನು ದಾಟಿ ವಿರುದ್ಧ ದಿಕ್ಕಿನ ಚರಂಡಿಗೆ ಪಲ್ಟಿಯಾಗಿ ಬಿದ್ದು ಬೆಂಕಿಗಾಹುತಿಯಾದ ಘಟನೆ ನ. 28ರ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಸಾಸ್ತಾನ ಸಮೀಪದ ಗುಂಡ್ಮಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಗೋಕರ್ಣದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ಗುಂಡ್ಮಿ ಬಸ್ ನಿಲ್ದಾಣದ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಆಟೋ ರಿಕ್ಷಾಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಾಜಕವನ್ನು ದಾಟಿ ವಿರುದ್ಧ ದಿಕ್ಕಿನ ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ.

ಅಪಘಾತ ಸಂಭವಿಸಿದ ಬೆನ್ನಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದೇ ವೇಳೆ ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಜಖಂಗೊಂಡಿದ್ದು, ಅದರಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮಹಿಳೆಯನ್ನು ತಕ್ಷಣ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ತಿಳಿದು ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಕಾರು ಬಹುತೇಕ ಸುಟ್ಟು ಭಸ್ಮವಾಗಿತ್ತು.

ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ