



ಡೈಲಿವಾರ್ತೆ: 29/ನ./2026




ಅಕ್ಕಿಯ ಬದಲು ವಿವಿಧ ಆಹಾರ ಧಾನ್ಯಗಳ ಕಿಟ್ ವಿತರಣೆ ಶೀಘ್ರ ಆರಂಭ: ಸಚಿವ ರಿಜ್ವಾನ್ ಅರ್ಷದ್

ಬೆಂಗಳೂರು: ಅಕ್ಕಿ ಬೆಳೆಯುವ ಪ್ರದೇಶಗಳಲ್ಲಿ ಪಡಿತರ ಅಕ್ಕಿಯ ಬಳಕೆ ಕಡಿಮೆ ಇರುವುದನ್ನು ಗಮನದಲ್ಲಿಟ್ಟುಕೊಂಡು, ಫಲಾನುಭವಿಗಳ ಆರೋಗ್ಯ ಮತ್ತು ಪೌಷ್ಟಿಕಾಂಶದ ಅಗತ್ಯಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಅಕ್ಕಿಯ ಬದಲಿಗೆ ವಿವಿಧ ಬಗೆಯ ಆಹಾರ ಧಾನ್ಯಗಳನ್ನು ಒಳಗೊಂಡ ಕಿಟ್ ವಿತರಿಸುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ಫಲಾನುಭವಿಗಳಿಗೆ ತಲುಪಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವ ದಂಧೆಯನ್ನು ನಿಯಂತ್ರಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕಳೆದ ಎರಡು ತಿಂಗಳಿಂದ ನಡೆಸಲಾಗುತ್ತಿರುವ ವಿಶೇಷ ಕಾರ್ಯಾಚರಣೆಯಲ್ಲಿ ಈವರೆಗೆ ಸುಮಾರು 5,000 ಟನ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ 415 ಪ್ರಕರಣಗಳನ್ನು ದಾಖಲಿಸಲಾಗಿದ್ದು, 285 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡವರಿಗೆ ವಿತರಿಸಬೇಕಾದ ಅಕ್ಕಿಯ ದುರುಪಯೋಗಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ವಿಶೇಷವಾಗಿ ಗಡಿಭಾಗಗಳಲ್ಲಿ ಪಡಿತರ ಅಕ್ಕಿಯ ಅಕ್ರಮ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವವರು ಕೂಡಲೇ ಇಂತಹ ಚಟುವಟಿಕೆಗಳನ್ನು ನಿಲ್ಲಿಸಬೇಕು. ಅಕ್ರಮ ದಂಧೆ ವಿರುದ್ಧ ಆರಂಭಿಸಿರುವ ಕಾರ್ಯಾಚರಣೆ ಯಾವುದೇ ಒತ್ತಡಕ್ಕೂ ಮಣಿಯದೆ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ, ಗೃಹ ಬಳಕೆಗೆ ಮೀಸಲಾದ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವುದು ಹಾಗೂ ಆಟೋ ರಿಕ್ಷಾಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸುವ ಪ್ರಕರಣಗಳ ಬಗ್ಗೆಯೂ ಇಲಾಖೆ ಗಂಭೀರ ನಿಗಾ ವಹಿಸಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬಂಕ್ಗಳು ಮತ್ತು ಗ್ಯಾಸ್ ಏಜೆನ್ಸಿಗಳ ಮೇಲೆ ತಪಾಸಣೆ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅವ್ಯವಹಾರಗಳಿಗೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ತಪಾಸಣೆ ಮತ್ತು ನಿಯಂತ್ರಣ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದರು.
ಗ್ರಾಹಕರ ಹಿತರಕ್ಷಣೆ ದೃಷ್ಟಿಯಿಂದ ಮಾರುಕಟ್ಟೆಯಲ್ಲಿ ಸರಿಯಾದ ತೂಕ ಹಾಗೂ ನಿಗದಿತ ಗುಣಮಟ್ಟದ ಸರಕುಗಳು ಲಭ್ಯವಾಗುವಂತೆ ನೋಡಿಕೊಳ್ಳುವುದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಕಾರ್ಯನಿರ್ವಹಣೆಯಲ್ಲಿರುವ ಲೋಪದೋಷಗಳನ್ನು ಪರಿಶೀಲಿಸಿ, ಅಗತ್ಯ ಸುಧಾರಣೆ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

