



ಡೈಲಿವಾರ್ತೆ: 29/ನ./2026




ದೇವರ ದರ್ಶನಕ್ಕೆ ಹೊರಟವರ ಬದುಕು ಹೆದ್ದಾರಿಯಲ್ಲೇ ಅಂತ್ಯ: ಭೀಕರ ಅಪಘಾತಕ್ಕೆ ಮಹಿಳೆಯರು, ಮಕ್ಕಳು ಸೇರಿ 13 ಮಂದಿ ದುರ್ಮರಣ!

ರಾಂಚಿ: ದೇವರ ದರ್ಶನಕ್ಕಾಗಿ ಯಾತ್ರಾ ಸ್ಥಳಕ್ಕೆ ತೆರಳುತ್ತಿದ್ದ ಭಕ್ತರ ವಾಹನವೊಂದು ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ರಾಂಚಿ-ಪಾಟ್ನಾ ರಾಷ್ಟ್ರೀಯ ಹೆದ್ದಾರಿ 33ರಲ್ಲಿ ಭಾನುವಾರ ನಸುಕಿನ ಜಾವ ಸುಮಾರು 2 ಗಂಟೆಗೆ ಈ ಅಪಘಾತ ಸಂಭವಿಸಿದೆ.
ಬಿಹಾರದ ನಳಂದ ಜಿಲ್ಲೆಯ ಜಂಘಾರೋ ಗ್ರಾಮದ ನಿವಾಸಿಗಳು ಸ್ಕಾರ್ಪಿಯೋ ವಾಹನದಲ್ಲಿ ಜಾರ್ಖಂಡ್ನ ಪ್ರಸಿದ್ಧ ಯಾತ್ರಾ ಸ್ಥಳವಾದ ರಾಜರಪ್ಪಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದರು. ವಾಹನದಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಸಂಭವಿಸಿದ ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸದ್ದು ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡು, ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಆದರೆ, ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ 13 ಮಂದಿ ಮೃತಪಟ್ಟಿದ್ದರು. ಅಪಘಾತದಲ್ಲಿ ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಗೆ ರಾಮಗಢದ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುವಿನ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಅಪಘಾತಕ್ಕೆ ನಿಖರ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

