ಡೈಲಿ ವಾರ್ತೆ: 29 ಜನವರಿ 2023

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ, ಅಣ್ಣಾಮಲೈ

ಬಂಟ್ವಾಳ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಆದರೆ ಗೆಲುವಿನ ಅಂತರ ಎಷ್ಟಿದೆ ಎಂಬುದರ ಬಗ್ಗೆ ಕುತೂಹಲ ಇದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದರು.

ಅವರು ಬಿ.ಸಿ.ರೋಡಿನಲ್ಲಿ ಬಂಟ್ವಾಳ ಬಿಜೆಪಿಯ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮ ವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರವಿದ್ದರೆ ದ.ಕ.ಜಿಲ್ಲೆಯಲ್ಲಿ ಇದಕ್ಕೆ ಪೂರಕವಾಗಿ ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಎಂಬ ನಾಲ್ಕು ಕೋಚ್ ಗಳೂ ಇರುವುದರಿಂದ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಅವರು

ತಮಿಳುನಾಡಿನಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೇರಿದಂತೆ ಕರ್ನಾಟಕದಲ್ಲಿಯೂ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆಯು ಬಿಜೆಪಿಯನ್ನು ಬಯ್ಯುವ ಯಾತ್ರೆಯಾಗಿದೆ. ಕಾಂಗ್ರೇಸಿಗರು ಕೇವಲ ಭ್ರಷ್ಟಚಾರಿಗಳು, ಹಿಂದೂ ವಿರೋಧಿಗಳು ಅಂದುಕೊಂಡಿದ್ದೆ ಆದರೆ ಅವರು ಸುಳ್ಳುಗಾರರೂ ಹೌದು ಎಂಬುದನ್ನು ಸಾಬೀತು ಪಡಿಸಿದ್ದಾರೆ, ದುಡ್ಡು ಕೊಟ್ಟರೂ ವಿದ್ಯುತ್ ನೀಡಲು ಸಾಧ್ಯವಾಗದ ಇವರು ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡುವುದಾದರೂ ಎಲ್ಲಿಂದ ಎಂದು ಪ್ರಶ್ನಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿದ್ದು, ಇನ್ನೂ ಒಂದಷ್ಟು ಆಗಬೇಕಿದೆ. ಆದರೆ ಶಾಂತಿಯ ಬಂಟ್ವಾಳ ನಿರ್ಮಾಣ ಮಾಡಿರುವುದು ನನಗೆ ಹೆಚ್ಚಿನ ತೃಪ್ತಿ ತಂದಿದೆ ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಪಾದಯಾತ್ರೆಯ ಸಹ ಸಂಚಾಲಕರಾದ ಮಾಧವ ಮಾವೆ, ಸುದರ್ಶನ್ ಬಜ ಉಪಸ್ಥಿತರಿದ್ದರು.

ನಿಧನರಾದ ಸಾಮಾಜಿಕ ಮುಂದಾಳು ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರಿಗೆ ಸಮಾರಂಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ನುಡಿನಮನ ಸಲ್ಲಿಸಿದರು.

ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.