ಡೈಲಿ ವಾರ್ತೆ:29 ಮಾರ್ಚ್ 2023

ಇಂದು ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಗೆ ಕ್ಷಣಗಣನೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಗೆ ಕ್ಷಣಗಣನೆ ಆರಂಭಗೊಂಡಿದೆ. ಕೇಂದ್ರ ಚುನಾವಣಾ ಆಯೋಗ ಬುಧವಾರ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದೆ.
ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಚುನಾವಣಾ ಅಧಿಸೂಚನೆ ಪ್ರಕಟಿಸುವುದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೇಂದ್ರ ಆಯೋಗ ಪೂರ್ಣಗೊಳಿಸಿದೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.

ದಾವಣಗೆರೆಯಲ್ಲಿ ನಡೆಯುವ ಮಹಾಸಂಗಮ ಕಾರ್ಯಕ್ರಮದ ಬಳಿಕ ಯಾವುದೇ ಕ್ಷಣದಲ್ಲಿ ಅಧಿಸೂಚನೆ ಪ್ರಕಟವಾಗಬಹುದೆಂದು ರಾಜಕೀಯ ಪಕ್ಷಗಳು ನಿರೀಕ್ಷಿಸಿದ್ದವು. ಮಾ.27ರಂದೇ ಘೋಷಣೆಯಾಗಬಹುದೆಂಬುದು ಬಹುತೇಕರ ನಿರೀಕ್ಷೆಯಾಗಿತ್ತು. ಬುಧವಾರವೇ ವೇಳಾಪಟ್ಟಿ ಘೋಷಣೆಯಾದರೆ, ತಕ್ಷಣವೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

2018ರ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆದಿತ್ತು. ಈ ಬಾರಿಯೂ ಒಂದೇ ಹಂತದಲ್ಲಿ ನಡೆಯುವ ಸಾಧ್ಯತೆಗಳೇ ಹೆಚ್ಚಾಗಿವೆ. ಕೇಂದ್ರ ಚುನಾವಣಾ ಆಯೋಗ ಮಾ.9ರಂದು ನಡೆಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಬೇಕು ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಗ್ರಹಿಸಿದ್ದರೆ, ಒಂದಕ್ಕಿಂತ ಹೆಚ್ಚು ಹಂತಗಳಲ್ಲಿ ಚುನಾವಣೆ ನಡೆಸುವಂತೆ ಬಿಜೆಪಿ ಬೇಡಿಕೆ ಇಟ್ಟಿತ್ತು ಎಂದು ಹೇಳಲಾಗಿತ್ತು. ಆದರೆ, ಒಂದೇ ಹಂತದ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ ಪಕ್ಷಗಳ ಅಭಿಪ್ರಾಯ ಕೇಳುವುದು ಸಾಮಾನ್ಯ ಪ್ರಕ್ರಿಯೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದೂ ಅಭಿಪ್ರಾಯಗಳು ಬಂದಿವೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಆಯೋಗ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ಹೇಳಿದ್ದರು.