ಡೈಲಿ ವಾರ್ತೆ:13 ಏಪ್ರಿಲ್ 2023

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಇಂದು ನಾಮಪತ್ರ ಸಲ್ಲಿಕೆ

ಕುಂದಾಪುರ:ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರು ಏ 13 ರಂದು ಗುರುವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಮೊದಲು ಕುಂದಾಪುರ ಶಾಸ್ತ್ರಿವೃತ್ತದಲ್ಲಿ ಕಾಂಗ್ರೆಸ್ ಬಹಿರಂಗ ಸಭೆ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಉದ್ಘಾಟಿಸಿದರು.



ಈ ಸಂದರ್ಭ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕುಂದಾಪುರದಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಕಾರ್ಯಕರ್ತರು ಮತದಾರರ ಮನವೊಲಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಆಡಳಿತರೂಢ ಬಿಜೆಪಿ ಚುನಾವಣಾ ಸಂದರ್ಭದಲ್ಲಿ ವಿಷಯಾಂತರಕ್ಕೆ ಮುಂದಾಗಿದೆ. ಆಧಾರ್-ಫಾನ್ ಕಾರ್ಡ್ ಲಿಂಕ್ ಬಗ್ಗೆ ಮಾಹಿತಿ ನೀಡದೆ ದಂಡದ ಹೆಸರಲ್ಲಿ ಲೂಟಿ ಮಾಡಲು ಮುಂದಾಗಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ನೀಡಿದ ಭರವಸೆಗಳೆಲ್ಲ ಭರವಸೆಯಾಗಿಯೇ ಇದೆ. ಜನರಿಗೆ ಬಿಜೆಪಿ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದರು.



ನ್ಯಾಯವಾದಿ, ಚಿಂತಕ ಸುದೀರ್ ಕುಮಾರ್ ಮುರೋಳಿ ಮಾತನಾಡಿ ಕಾಂಗ್ರೆಸ್ ಪಕ್ಷವು ಜನರ ಬದುಕನ್ನು ರೂಪಿಸುವ ಕೆಲಸ ಮಾಡುತ್ತದೆಯೇ ಹೊರತು ಜನರ ಭಾವನೆಗಳ ಜೊತೆ ಆಟವಾಡುತ್ತಿಲ್ಲ. ಬಿಜೆಪಿಯ ಸಂಸದೆ ಇವತ್ತು ಚುನಾಯಿತ ಕ್ಷೇತ್ರವನ್ನೇ ಮರೆತು ಬಿಟ್ಟಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ರೈತರ ಸಮಸ್ಯೆಗಳಿಗೆ ಸರ್ಕಾರದ ಬಳಿ ಉತ್ತರವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ಅವರಿಗೆ ರಾಜಕಾರಣ ಹೊಸತಲ್ಲ, ಕ್ಷೇತ್ರದ ಸಮಗ್ರ ಪರಿಚಯ ಹೊಂದಿದ್ದಾರೆ. ಅವರು ಗೆಲುವು ಸಾಧಿಸಲಿದ್ದಾರೆ ಎಂದರು.

ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಮಾತನಾಡಿ ಈ ಕುಂದಾಪುರ ಕ್ಷೇತ್ರ ಕಳೆದ 24 ವರ್ಷದಿಂದ ಬಿಜೆಪಿ ಕೈಯಲ್ಲಿ ಇತ್ತು. ಯಾವುದೇ ಅಭಿವೃದ್ಧಿ ಕಾಣಲಿಲ್ಲ. ಆದ್ದರಿಂದ ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ಮಹಿಳೆಯರು, ಯುವಕರು ತಂಡೋಪ ತಂಡವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಬಾರಿ ನಮಗೊಂದು ಅವಕಾಶ ಕೊಡುತ್ತಾರೆ ಎನ್ನುವ ಭರವಸೆ ನಮಗಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕ್ಷೇತ್ರದ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಅಶೋಕ್ ಪೂಜಾರಿ ಬೀಜಾಡಿ, ಹಿರಿಯಣ್ಣ ಚಾತ್ರಬೆಟ್ಟು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ ಶೆಟ್ಟಿ ಗುಡಿಬೆಟ್ಟು, ಕೃಷ್ಣದೇವ ಕಾರಂತ, ವಂಡಬಳ್ಳಿ ಜಯರಾಮ ಶೆಟ್ಟಿ, ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ವಂಡ್ಸೆ, ಮಹಿಳಾ ಕಾಂಗ್ರೆಸ್‍ನ ದೇವಕಿ ಸಣ್ಣಯ್ಯ, ರೇಖಾ ಸುವರ್ಣ, ಪ್ರಕಾಶ್ಚಂದ್ರ ಶೆಟ್ಟಿ, ದೇವಾನಂದ ಶೆಟ್ಟಿ, ಸದಾನಂದ ಶೆಟ್ಟಿ, ದಿನೇಶ ಪುತ್ರನ್, ಹರೀಶ ಕಿಣಿ, ಬೆಳ್ವೆ ಸತೀಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ವಂದಿಸಿದರು. ವಿನೋದ್ ಕ್ರಾಸ್ಟೋ ಕಾರ್ಯಕ್ರಮ ನಿರ್ವಹಿಸಿದರು.