ಡೈಲಿ ವಾರ್ತೆ:19 ಏಪ್ರಿಲ್ 2023
ಶಿವಮೊಗ್ಗದಲ್ಲಿ ಬಿಜೆಪಿಗೆ ಶಾಕ್: ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ. ಇದೀಗ ಶಿವಮೊಗ್ಗದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ವಿಧಾನಪರಿಷತ್ ಹಾಗೀ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೂ ಟಿಕೆಟ್ ಸಿಗುವುದು ಖಾತ್ರಿ ಇಲ್ಲದಿರುವುದರಿಂದ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆಗೂ ಮೊದಲೇ ಶಿವಮೊಗ್ಗದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ.
ಶಿಮಮೊಗ್ಗದಲ್ಲಿಂದು ಬೆಳ್ಳಂಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಮಧ್ಯಾಹ್ನದ ಬಳಿಕ ತಿಳಿಸುವೆ ಎಂದು ಸ್ಪಷ್ಟಪಡಿಸಿದರು.