ಡೈಲಿ ವಾರ್ತೆ: 14 ಮೇ 2023
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕುರುಬ ಸಮುದಾಯ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಯನ್ನಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಲ್ಲಿ ಒತ್ತಡ ಹೇರಲು ಇಂದು ಬೆಂಗಳೂರಿನ ಕುರುಬರ ಸಂಘದಲ್ಲಿ ಕುರುಬ ಜನಾಂಗದ ಮುಖಂಡರ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಕುರುಬ ಸಮಾಜದ ಪ್ರಭಾರಿ ಅಧ್ಯಕ್ಷ ಸುಬ್ರಹ್ಮಣ್ಯ,ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಎಂ.ಶಿವರಾಜು, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ನಾಗರಾಜ್ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು.
ಸಭೆಯಲ್ಲಿ ಕುರುಬ ಸಮಾಜದಿಂದ ಕಾಂಗ್ರೆಸ್ ಪಕ್ಷದಿಂದ ಹದಿನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸುಮಾರು ನೂರು ಮಂದಿ ಶಾಸಕರು ಸಿದ್ದರಾಮಯ್ಯ ಅವರ ವರ್ಚಸು, ಬೆಂಬಲದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ, ಇಂದಿರಾ ಕ್ಯಾಂಟಿನ್ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಜನಮನ ಗೆದ್ದಿದ್ದರು ಈ ಹಿನ್ನಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.