ಡೈಲಿ ವಾರ್ತೆ: 18 ಮೇ 2023
ಪುತ್ತೂರು: ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ – ಎಡಿಜಿಪಿ ಅಲೋಕ್
ಬೆಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪುತ್ತೂರು ಘಟನೆ ಸಂಬಂಧ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಂತಹ ಕಾನೂನುಬಾಹಿರ ಮತ್ತು ಅನಗತ್ಯ ಕ್ರಮಗಳನ್ನು ಸಹಿಸುವುದಿಲ್ಲ ಎಂದಿದ್ದಾರೆ.
ಇನ್ನು ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪುತ್ತೂರು ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.