ಡೈಲಿ ವಾರ್ತೆ:07 ಜೂನ್ 2023
ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000ರೂ.ಹಣ ಪಡೆಯಲು ನೀವು ಯಾವ ದಾಖಲೆ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ
ಬೆಂಗಳೂರು;ಕಾಂಗ್ರೆಸ್ ನ 5 ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಆಡಳಿತಾತ್ಮಕ ಅನುಮೋದನೆಯನ್ನು ಸರ್ಕಾರ ನೀಡಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಕುರಿತು ನಡವಳಿಗಳನ್ನು ಹೊರಡಿಸಿದ್ದಾರೆ.
ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ, ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಈ ಹಿನ್ನಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಷರತ್ತುಗಳು:
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಲಿದೆ.
ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸುವುದು. ಈ ನಂತ್ರ ಜುಲೈ.15ರಿಂದ ಫಲಾನುಭವಿಗಳ ಆಯ್ಕೆ ನಡೆಯಲಿದೆ.
ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಆಗಲಿದೆ
ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿ ಆಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು.
ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡು ಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡನೆ ಮಾಡುವುದು ಕಡ್ಡಾಯವಾಗಿದೆ. ಈ ಯೋಜನೆಗೆ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅರ್ಹರಾಗಿರುವುದಿಲ್ಲ.ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ, ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿರುವುದಿಲ್ಲ.