ಡೈಲಿ ವಾರ್ತೆ:15 ಜೂನ್ 2023
ಮಂಗಳೂರು:ಮನೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ಗಣೇಶ ನಾಯ್ಕ್(26), ಕೊಡಗಿನ ರಂಜಿತ್ ಕೆ.ಆರ್(26) ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಶ್ರೀ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿತ್ತು. ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿದ್ದಾರೆ.
ಗಣೇಶ ನಾಯ್ಕ್, ರಂಜಿತ್ ಕೆ.ಆರ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 55 ಲಕ್ಷ ರೂ.ಮೌಲ್ಯದ 1 ಕೆಜಿ ವಿವಿಧ ನಮೂನೆಯ ಚಿನ್ನಾಭರಣ, 2 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.