ಡೈಲಿ ವಾರ್ತೆ: 10 ಜುಲೈ 2023
ದೊಡ್ಡಬಳ್ಳಾಪುರ: ಸಾರಿಗೆ ಅವ್ಯವಸ್ಥೆ ವಿರುದ್ಧ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ!
ಚಿಕ್ಕಬಳ್ಳಾಪುರ: ಸಾರಿಗೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತಂತಾಗಿದೆ ಎಂದು ಆರೋಪಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಹುಲಿಕುಂಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ಸನ್ನು ವಿದ್ಯಾರ್ಥಿಗಳು ತಡೆದಿದ್ದಾರೆ. ದೊಡ್ಡಬಳ್ಳಾಪುರ-ತುಮಕೂರು ಮಾರ್ಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಒಂದೇ ಬಸ್ಸಿನಲ್ಲಿ 130 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾಗಬೇಕಾಗಿದೆ. ಬಸ್ಸಿನ ಡೋರಿನಲ್ಲೇ ನೇತಾಡಿಕೊಂಡು ತೆರಳಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದೆ. ಆದರೂ ಬಸ್‍ಗಳ ವ್ಯವಸ್ಥೆ ಮಾಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಆಯತಪ್ಪಿ ಬಿದ್ದು ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಸಮರ್ಪಕ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡುವ ವರೆಗೂ ಬಸ್ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಜನ ಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.