ಡೈಲಿ ವಾರ್ತೆ:04 ಆಗಸ್ಟ್ 2023

ಉಡುಪಿ:ಪ್ರಚೋದನಾಕಾರಿ ಭಾಷಣ – ಶರಣ್ ಪಂಪ್ ವೆಲ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು!

ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ವಿಹಿಪಂ ಮುಖಂಡರಾದ ಶರಣ್ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ, ಹಿಡಿಯಲು ಸಿದ್ಧರಾಗಬೇಕು” ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಅದೇ ರೀತಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ.
ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದೆ.