ಡೈಲಿ ವಾರ್ತೆ:29 ಸೆಪ್ಟೆಂಬರ್ 2023

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಗಾಳಿ ಮಳೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಂಕಿ-ಅಂಶದ ಪ್ರಕಾರ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ನಾಳೆ ಮಧ್ಯಾಹ್ನದವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ. ಹೀಗಾಗಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 01 ರವರೆಗೆ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ ಸಾಧಾರಣದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ಕರಾವಳಿಯಲ್ಲಿ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಮುಂದಿನ 3 ದಿನಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಸೆ. 29 ರಿಂದ ಸೆ. 30ರ ಬೆಳಗ್ಗಿನವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.